ಉಡುಪಿ: ಎಂಡಿಎಂಎ ಮಾರಾಟಕ್ಕೆ ಯತ್ನ; ಆರೋಪಿ ಬಂಧನ

ಉಡುಪಿ: ನಗರದ ಅಜ್ಜರಕಾಡು ಭುಜಂಗ ಪಾರ್ಕ್‌ ಸಮೀಪ ನಿಷೇಧಿತ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವಿಜಯ್ ಅಲಿಯಾಸ್ ವಿಜಯ್ ಪೂಜಾರಿ (36) ಎಂಬಾತನನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದು, ₹85 ಸಾವಿರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಅ.17ರಂದು ರಾತ್ರಿ 10.30ರ ಸುಮಾರಿಗೆ ಭುಜಂಗ ಪಾರ್ಕ್‌ ಸಮೀಪ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಉದ್ಯಾವರದ ಅಂಕುದ್ರು ನಿವಾಸಿಯಾದ ಈತ ಸ್ಕೂಟರ್‌ನ ಡಿಕ್ಕಿಯಲ್ಲಿ ಮಾದಕ ವಸ್ತು ಇಟ್ಟುಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದ ಎನ್ನಲಾಗಿದೆ.

ಆರೋಪಿಯಿಂದ 17.66 ಗ್ರಾಂ ತೂಕದ ಎಂಡಿಎಂಎ ಎಂದು ಉಲ್ಲೇಖಿಸಲಾದ ಆಂಫೆಟಮೈನ್/ಮೆಥಾಂಫೆಟಮೈನ್ ಹೊಂದಿರುವ ಒಂಬತ್ತು ಜಿಪ್ ಕವರ್‌ಗಳು, 2.18 ಗ್ರಾಂ ತೂಕದ ಬಣ್ಣದ ಮಾತ್ರೆ ಹಾಗೂ ಪುಡಿ, ತೂಕದ ಯಂತ್ರ, ಮೊಬೈಲ್ ಫೋನ್ ಮತ್ತು ಕೃತ್ಯಕ್ಕೆ ಬಳಸಿದ ಸ್ಕೂಟರ್‌ ಸೇರಿದಂತೆ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಎರಡು ಎನ್‌ಡಿಪಿಎಸ್ ಕಾಯ್ದೆ ಪ್ರಕರಣಗಳು ಸೇರಿದಂತೆ ನಾಲ್ಕು ಪ್ರಕರಣಗಳು ದಾಖಲಾಗಿವೆ. ಸೆ.24ರಂದು ಹಿರಿಯಡ್ಕ ಜೈಲಿನಿಂದ ಬಿಡುಗಡೆಯಾಗಿದ್ದ ಈತ ರೂಢಿಗತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(ಸಿ), 22(ಬಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ ಉಪವಿಭಾಗದ ಡಿವೈಎಸ್‌ಪಿ ಬೆಳ್ಳಿಯಪ್ಪ ಅವರ ಮಾರ್ಗದರ್ಶನದಲ್ಲಿ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ ಪ್ರಸಾದ್ ಪಿ. ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಪಿಎಸ್‌ಐ ಭರತೇಶ್ ಕಂಕಣವಾಡಿ, ರತ್ನಾಕರ್ ಕೆ. ಹಾಗೂ ಠಾಣೆಯ ಸಿಬ್ಬಂದಿ ಪಾಲ್ಗೊಂಡಿದ್ದರು.