ಉಡುಪಿ: ಕಳೆದ ಐದು ವರ್ಷಗಳ ಹಿಂದೆ ಉಡುಪಿ ಇಂದ್ರಾಳಿಯ ಮನೆಯಲ್ಲಿ ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಕೊಲೆಗೈದು ಹೋಮ ಕುಂಡದಲ್ಲಿ ಹಾಕಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಪತ್ನಿ, ಮಗ ಸಹಿತ ಮೂವರಿಗೆ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಿತಾವಧಿ ಜೈಲು ಶಿಕ್ಷೆ ವಿಧಿಸಿ ಇಂದು ಮಹತ್ವದ ತೀರ್ಪು ನೀಡಿದೆ.
ಭಾಸ್ಕರ ಶೆಟ್ಟಿಯ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜ್ಯೋತಿಷಿ ನಿರಂಜನ್ ಭಟ್ ಶಿಕ್ಷೆಗೆ ಗುರಿಯಾದ ಆರೋಪಿಗಳು. ಸಾಕ್ಷ್ಯನಾಶ ಆರೋಪಿ ರಾಘವೇಂದ್ರನನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಪ್ರಕರಣದ ಹಿನ್ನೆಲೆ:
2016ರ ಜು.28ರಂದು ಮಧ್ಯಾಹ್ನ 3 ಗಂಟೆಗೆ ಇಂದ್ರಾಳಿಯ ಮನೆಯಲ್ಲಿ ಭಾಸ್ಕರ್ ಶೆಟ್ಟಿಯನ್ನು ಆತನ ಪತ್ನಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜೋತಿಷ್ಯ ನಿರಂಜನ್ ಭಟ್ ಸೇರಿ ಕೊಲೆ ಮಾಡಿದ್ದರು. ಬಳಿಕ ಮೃತದೇಹವನ್ನು ನಂದಳಿಕೆಯಲ್ಲಿರುವ ನಿರಂಜನ ಭಟ್ ಮನೆಯಲ್ಲಿನ ಹೋಮ ಕುಂಡದಲ್ಲಿ ಹಾಕಿ ಸುಟ್ಟು ಹಾಕಿದ್ದರು.
ಜು. 31ರಂದು ಭಾಸ್ಕರ್ ಶೆಟ್ಟಿ ತಾಯಿ ತನ್ನ ಮಗ ನಾಪತ್ತೆಯಾಗಿರುವುದಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ನಾಪತ್ತೆ ಪ್ರಕರಣದ ತನಿಖೆಗೆ ಇಳಿದ ಪೊಲೀಸರಿಗೆ ಈ ಕೊಲೆ ಬೆಳಕಿಗೆ ಬಂದಿತ್ತು. ಅದರಂತೆ ಆ.7ರಂದು ಪತ್ನಿ ರಾಜೇಶ್ವರಿ ಹಾಗೂ ಮಗ ನವನೀತ್‌ನನ್ನು ಮತ್ತು ಆ. 8ರಂದು ನಿರಂಜನ್ ಭಟ್ ನನ್ನು ಪೊಲೀಸರು ಬಂಧಿಸಿದ್ದರು.
ಸದ್ಯ ಪ್ರಕರಣದ ಪ್ರಮುಖ ಆರೋಪಿ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ದೊರೆತಿದ್ದು, ಮಗ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜೋತಿಷ್ಯ ನಿರಂಜನ್ ಭಟ್ ಬೆಂಗಳೂರು ಜೈಲಿನಲ್ಲಿದ್ದಾರೆ. ಸಾಕ್ಷ್ಯನಾಶ ಆರೋಪಿಗಳಾದ ನಿರಂಜನ್ ಭಟ್ ತಂದೆ ಶ್ರೀನಿವಾಸ ಭಟ್ ವಿಚಾರಣೆ ಮಧ್ಯೆ ಅನಾರೋಗ್ಯದಿಂದ ಮೃತಪಟ್ಟರೆ, ರಾಘವೇಂದ್ರ ಜಾಮೀನು ಪಡೆದುಕೊಂಡಿದ್ದಾರೆ.
ಹಲವು ಸಾಕ್ಷಿಗಳನ್ನು ವಿಚಾರಣೆ ನಡೆಸಿದ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್. ಅವರು ಇಂದು ಬೆಳಿಗ್ಗೆ ಆರೋಪಿಗಳಾದ ಭಾಸ್ಕರ ಶೆಟ್ಟಿಯ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜ್ಯೋತಿಷಿ ನಿರಂಜನ್ ಭಟ್ ದೋಷಿಗಳೆಂದು ಅಭಿಪ್ರಾಯಪಟ್ಟಿದ್ದರು. ಮಧ್ಯಾಹ್ನದ ಬಳಿಕ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದು, ಅದರಂತೆ ಮೂವರು ಆರೋಪಿಗಳಿಗೆ ಜೀವಿತಾವಧಿ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಾಸಿಕ್ಯೂಶನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶಾಂತರಾಮ್ ಶೆಟ್ಟಿ ವಾದ ಮಂಡಿಸಿದ್ದಾರೆ.