‘ಕರ್ನಾಟಕ ಸ್ಟೋರಿ’ಗೆ ಆಸ್ಪದವಿಲ್ಲ; ವೀಡಿಯೋ ಪ್ರಕರಣ ಸಮಗ್ರ ತನಿಖೆ ನಡೆಸಿ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಜಿಹಾದಿ ಮಾನಸಿಕತೆಯ ಕೆಲವು ವಿದ್ಯಾರ್ಥಿನಿಯರು ಉಡುಪಿ‌ಯ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ಗಂಭೀರ ಪ್ರಕರಣದಲ್ಲಿ ಭಾಗಿಯಾಗಿದ್ದು, ಕಳೆದ ಒಂದು ವರ್ಷದಿಂದ ನಿರಂತರವಾಗಿ ಈ ಪ್ರಕ್ರಿಯೆ ನಡೆಯುತ್ತಿದೆ ಎಂಬ ಮಾಹಿತಿ ಇದೆ. ಶಿಕ್ಷಣ ಮತ್ತು ಸಾಂಸ್ಕೃತಿಕ ನಗರಿ ಉಡುಪಿಯ ಖ್ಯಾತಿಗೆ ಮಸಿ ಬಳಿಯುವ ಪ್ರಯತ್ನದ ಮೂಲಕ ‘ಕೇರಳ ಸ್ಟೋರಿ’ಯಂತೆ ಉಡುಪಿ ಸಹಿತ ‘ಕರ್ನಾಟಕ ಸ್ಟೋರಿ’ಗೆ ಸ್ಕೆಚ್ ಹಾಕಲು ಎಂದಿಗೂ ಅವಕಾಶ ನೀಡಲಾರೆವು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಈಗಾಗಲೇ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಈ ಸಂಬಂಧವಾಗಿ ಮೂರು ಮಂದಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರನ್ನು ಅಮಾನತು ಮಾಡಿರುವುದಾಗಿ ತಿಳಿಸಿದ್ದು, ಇದರಿಂದ ಪ್ರಕರಣದ ನಿಖರತೆ ಸಾಬೀತಾಗಿದೆ. ಶಿಕ್ಷಣ ಸಂಸ್ಥೆಯ ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋಗಳನ್ನು ಕಳ್ಳತನದಿಂದ ಚಿತ್ರೀಕರಿಸಿ ಅವುಗಳನ್ನು ಸಮಾಜಘಾತುಕ ಶಕ್ತಿಗಳಿಗೆ ನೀಡುವ ಕುಕೃತ್ಯದ ಯೋಜನೆಯ ಮೂಲಕ ಅವರ ಭವಿಷ್ಯವನ್ನು ಹಾಳುಗೆಡಹಲು ರೂಪಿಸಿರುವ ಈ ಹುನ್ನಾರ ಅತ್ಯಂತ ಖಂಡನೀಯ ಎಂದು ಅವರು ತಿಳಿಸಿದ್ದಾರೆ.

ರಾಜ್ಯ ಸರಕಾರ ಪೊಲೀಸರ ಮೇಲೆ ಒತ್ತಡ ಹೇರಿ ಈ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿರುವ ಬಗ್ಗೆ ಗುಮಾನಿ ಇದೆ. ಮೂರು ಮಂದಿ ತಪ್ಪಿತಸ್ಥ ವಿದ್ಯಾರ್ಥಿನಿಯರು ತಮ್ಮ ಮೊಬೈಲ್ ಗಳಲ್ಲಿ ಚಿತ್ರೀಕರಿಸಿಕೊಂಡಿದ್ದ ವೀಡಿಯೋಗಳನ್ನು ಡಿಲೀಟ್ ಮಾಡಲಾಗಿದೆ ಹಾಗೂ ಸದ್ರಿ ಪ್ರಕರಣದಲ್ಲಿ ಇಬ್ಬರು ಮುಸ್ಲಿಂ ಯುವಕರು ಕೂಡಾ ಶಾಮೀಲಾಗಿದ್ದಾರೆ ಎಂಬ ವಿಚಾರವನ್ನು ಸಂತ್ರಸ್ತ ವಿದ್ಯಾರ್ಥಿನಿಯರು ಬಹಿರಂಗಪಡಿಸಿರುವುದಾಗಿ ತಿಳಿದುಬಂದಿದೆ. ಇದರ ಬಗ್ಗೆ ಪೊಲೀಸ್ ಇಲಾಖೆ ತನಿಖೆಯ ದಾರಿ ತಪ್ಪಿಸುವ ಅಥವಾ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಸಿದರೆ ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಪ್ರಕರಣದ ಬಗ್ಗೆ ಜಾಗೃತಿ ಮೂಡಿಸುವ ಜೊತೆಗೆ ವಿದ್ಯಾರ್ಥಿಗಳೊಂದಿಗೆ ಸೇರಿ ನ್ಯಾಯಕ್ಕಾಗಿ ತೀವ್ರ ಹೋರಾಟ ನಡೆಸಲಿದೆ.

ಈ ಗಂಭೀರ ಪ್ರಕರಣವನ್ನು ರಾಜ್ಯ ಸರಕಾರ ಮತ್ತು ಗೃಹ ಇಲಾಖೆ ಲಘುವಾಗಿ ಪರಿಗಣಿಸಬಾರದು. ‘ದೆ ಆರ್ ಮೈ ಬ್ರದರ್ಸ್’ ಹಾಗೂ ‘ಅಲ್ಲಾನ ಕೃಪೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಿದೆ’ ಎನ್ನುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಈ ಪ್ರಕರಣವನ್ನು ಹಳ್ಳ ಹಿಡಿಸುವ ಪ್ರಯತ್ನ ಮಾಡಿದಲ್ಲಿ ಅದರ ಪರಿಣಾಮವನ್ನು ಮುಂದಿನ ದಿನಗಳಲ್ಲಿ ಎದುರಿಸಬೇಕಾದೀತು ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.