ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಹಾಗೂ ಪರ್ಯಾಯ ಶಿರೂರು ಮಠ ಇದರ ವತಿಯಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ. 90ರಷ್ಟು ಅಂಕ ಗಳಿಸಿದ ಪ್ರತಿಭಾನ್ವಿತ ಸ್ಕೌಟ್ಸ್- ಗೈಡ್ಸ್ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವು ಜೂ. 26ರಂದು ಉಡುಪಿ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ ಶೆಟ್ಟಿ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಜಿಲ್ಲಾ ಸಂಸ್ಥೆಯು ಕಳೆದ ಏಳೆಂಟು ವರ್ಷದಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಬಾರಿ ಸುಮಾರು 1200 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.
ಪ್ರಶಸ್ತಿ ಪತ್ರ, ಒಂದು ಸಾವಿರ ನಗದು ಪುರಸ್ಕಾರವಿರಲಿದೆ. ಕಾರ್ಯಕ್ರಮವನ್ನು ಮಾಜಿ ಸಚಿವ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಡಾ. ಪಿ.ಜಿ.ಆರ್. ಸಿಂಧ್ಯಾ ಉದ್ಘಾಟಿಸಲಿದ್ದಾರೆ.
ಶಿರೂರು ಮಠಾಧೀಶರಾದ ವೇದವರ್ಧನತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಆರೋಗ್ಯ ಸಚಿವ ಯು.ಟಿ ಖಾದರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಜೂ. 27ರಿಂದ ಜೂ. 29ರವರೆಗೆ ರಾಜ್ಯ ಮಟ್ಟದ ವಿಶೇಷ ಶಿಬಿರ “ಏಕತ” ಸಾಮಾಜಿಕ ಸಾಮರಸ್ಯ ಶಿಬಿರವು ವಿಜಯ ಮಕ್ಕಳ ಕೂಟ ಆತ್ರಾಡಿ ವಂಡ್ಲೆ ಇಲ್ಲಿ ನಡೆಯಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಗೈಡ್ ಆಯುಕ್ತ ಜ್ಯೋತಿ ಜೆ. ಪೈ, ಜಿಲ್ಲಾ ಕಾರ್ಯದರ್ಶಿ ಆನಂದ ಬಿ. ಆಡಿಗ, ಜಿಲ್ಲಾ ಖಜಾಂಚಿ ಹರಿಪ್ರಸಾದ್ ರೈ ಹಾಗೂ ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಸುಮನ ಶೇಖರ್ ಉಪಸ್ಥಿತರಿದ್ದರು.

















