ಉಡುಪಿಯಲ್ಲಿ ಕೊರೊನಾ ಸೋಂಕಿಗೆ ಆರನೇ ಬಲಿ: ಮಧುಮೇಹದಿಂದ ಬಳಲುತ್ತಿದ್ದ ವ್ಯಕ್ತಿ ಸಾವು

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇವರು ತೀವ್ರತರದ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾಗೆ ಮೃತಪಟ್ಟವರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈ ವ್ಯಕ್ತಿಗೆ ಕೊರೊನಾ ಲಕ್ಷಣಗಳು ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಇವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಇವರಿಗೆ ಕೊರೊನಾ ಇರುವುದು ದೃಢಪಟ್ಟಿದ್ದು, ನಗರದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಿನ್ನೆ ರಾತ್ರಿ ಆರೋಗ್ಯ ಮತ್ತಷ್ಟು ಹದಗೆಟ್ಟು ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ.