ಉಡುಪಿಯ ಎರಡನೆ ಕೊರೊನಾ ಸೋಂಕಿತ ಆಸ್ಪತ್ರೆಯಿಂದ ಡಿಸ್ಚಾರ್ಜ್: 14 ದಿನ ಹೋಮ್ ಕ್ವಾರಂಟೈನ್ ನಲ್ಲಿ ಇರುವಂತೆ ಸೂಚನೆ

ಉಡುಪಿ: ಜಿಲ್ಲೆಯ ಎರಡನೇ ಕೊರೊನಾ ಸೋಂಕಿತ (ಕೋವಿಡ್-19) ಮಣಿಪುರದ 35ರ  ಹರೆಯದ ಯುವಕ ಸಂಪೂರ್ಣ ಗುಣಮುಖನಾಗಿದ್ದು, ಆತನನ್ನು ಇಂದು ಮಧ್ಯಾಹ್ನದ ವೇಳೆಗೆ ಉಡುಪಿಯ ಡಾ. ಟಿಎಂಎ ಪೈ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ ಹೇಳಿದ್ದಾರೆ.
ಈತನ ಗಂಟಲಿನ ದ್ರವದ ಮಾದರಿಯನ್ನು ಎರಡು ಬಾರಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆ ಎರಡು ಮಾದರಿಗಳಲ್ಲಿ ನೆಗೆಟಿವ್ ವರದಿ ಬಂದಿದ್ದು, ಇದೀಗ ಆತ ಸೋಂಕಿನಿಂದ ಸಂಪೂರ್ಣ ಚೇತರಿಸಿ ಕೊಂಡಿರುವುದು ಖಚಿತವಾಗಿದೆ. ಹೀಗಾಗಿ ಆತನನ್ನು
ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಈತ ಬಿಡುಗಡೆ ಆದರೂ 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ನಲ್ಲಿ ಇರುವಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಈತ ಮಾರ್ಚ್ 17ರಂದು ದುಬೈನಿಂದ ಉಡುಪಿಗೆ ಬಂದಿದ್ದು, ಬಳಿಕ ಈತನಲ್ಲಿ ಕೊರೊನಾದ ಲಕ್ಷಣ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಈತನನ್ನು ಮಾರ್ಚ್ 27 ರಂದು ಕಾರ್ಕಳದ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಆತನ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು, ಆ ವರದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.