ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಉಡುಪಿಯ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಾವಣಗೆರೆ ಮೂಲದ 70 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ವೃದ್ಧ ಕಳೆದ ಮೂರು ದಿನಗಳ ಹಿಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಗಂಟಲಿನ ದ್ರವದ ಪರೀಕ್ಷೆ ನಡೆಸಿದಾಗ ಸೋಂಕು ಇರುವುದು ದೃಢಪಟ್ಟಿತ್ತು. ಈ ನಿಟ್ಟಿನಲ್ಲಿ ಅವರನ್ನು ಜುಲೈ 10ರಂದು ಉಡುಪಿಯ ಡಾ. ಟಿಎಂಎ ಪೈ ಕೊವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಂದೇ ರಾತ್ರಿ ವೃದ್ಧ ಮೃತಪಟ್ಟಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.