ಉಡುಪಿ: ಶೀತ, ಕೆಮ್ಮು, ಜ್ವರ ಹಾಗೂ ಐ.ಎಲ್.ಐ ಚಿಕಿತ್ಸೆಗೆ ಬರುವ ರೋಗಿಗಳಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಗಳನ್ನು ಮಾಡಿಸಬೇಕು. ತಪ್ಪಿದ್ದಲ್ಲಿ ಚಿಕಿತ್ಸೆ ನೀಡದ ಖಾಸಗಿ ಆಸ್ಪತ್ರೆಗಳ ನೊಂದಣಿಯನ್ನು ರದ್ದು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೊಂದಣಾ ಪ್ರಾಧಿಕಾರದ ಕುಂದುಕೊರತೆ ನಿವಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಇತ್ತೀಚಿನ ದಿನಗಳಲ್ಲಿ ಜನರು ಕೋವಿಡ್ ಸೋಂಕಿನ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇದರಿಂದಾಗಿ ಎರಡನೇ ಅಲೆ ಪ್ರಾರಂಭವಾಗುವ ಸಾಧ್ಯತೆಗಳಿವೆ. ಇದಕ್ಕೆ ಕಡಿವಾಣ ಹಾಕಬೇಕು. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೆಮ್ಮು, ಶೀತ, ಜ್ವರ ಹಾಗೂ ಐ.ಎಲ್.ಐ ಚಿಕಿತ್ಸೆ ಪಡೆಯಲು ಬಂದAತಹ ರೋಗಿಗಳಿಗೆ ತಪ್ಪದೇ ಕೋವಿಡ್ ಪರೀಕ್ಷೆ ಮಾಡಿಸಬೇಕು. ಖಾಸಗಿ ವೈದ್ಯಕೀಯ ಸಂಸ್ಥೆಗಳು ರೋಗಿಗಳ ಬಗ್ಗೆ ನಿಖರ ಮಾಹಿತಿಯನ್ನು ನೀಡಬೇಕು ಎಂದರು.
ಜಿಲ್ಲೆಯಲ್ಲಿ ವೈದ್ಯಕೀಯ ವೃತ್ತಿಯನ್ನು ಪ್ರಾರಂಭಿಸುವ ಮುನ್ನ ಜಿಲ್ಲಾ ಮಟ್ಟದ ನೋಂದಣಿ ಪ್ರಾಧಿಕಾರದಲ್ಲಿ ನೋಂದಣಿ ಮಾಡಿಸಿ, ತಮ್ಮ ವೃತ್ತಿಯನ್ನು ಕೈಗೊಳ್ಳಬೇಕು. ನೊಂದಣಿ ಮಾಡದೇ ಚಿಕಿತ್ಸೆ ನೀಡಿದವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ವಂಶ ಪಾರಂಪರೆಯಾಗಿ ವೈದ್ಯಕೀಯ ಚಿಕಿತ್ಸೆಯನ್ನು ನೀಡುತ್ತಿದ್ದೇವೆ ಎಂಬ ಹೆಸರಿನಲ್ಲಿ ಔಷಧೋಪಚಾರಗಳನ್ನು ನೀಡುವಾಗ ಅಲೋಪಥಿ ಮೆಡಿಸನ್ ನೀಡುವುದು ಅಪರಾಧ. ಇಂತಹ ವೃತ್ತಿಗಳು ಕಂಡುಬಂದಲ್ಲಿ ಕಾನೂನು ಅಡಿಯಲ್ಲಿ ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕೆಂದು ತಾಲೂಕು ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಾಧಿಕಾರಕ್ಕೆ ಅಗತ್ಯ ದಾಖಲೆಗಳೊಂದಿಗೆ ಕ್ಲಿನಿಕ್ ಅಥವಾ ನರ್ಸಿಂಗ್ ಹೋಮ್‌ಗಳನ್ನು ತೆರೆಯಲು ಅರ್ಜಿ ಸಲ್ಲಿಸಿದಾಗ ನಿಯಮಾನುಸಾರ ಅವರುಗಳಿಗೆ ಶೀಘ್ರದಲ್ಲಿ ಲೈಸೆನ್ಸ್ ನೀಡಬೇಕೆಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸುಧೀರ್ ಚಂದ್ರ ಸೂಡ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮರಾವ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಪ್ರಶಾಂತ್ ಭಟ್, ಜಿಲ್ಲಾ ಸರ್ಜನ್ ಮಧುಸೂದನ್ ನಾಯಕ್, ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ನಣ್ಯ ಶೇರಿಗಾರ್, ಮತ್ತಿತರ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.