ಉಡುಪಿ: ಭಾರತ ಚುನಾವಣಾ ಆಯೋಗವು 13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು “ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ” ಎಂಬ ಧ್ಯೇಯವಾಕ್ಯದೊಂದಿಗೆ ಆಚರಿಸುವಂತೆ ನಿರ್ದೇಶನ ನೀಡಿರುವ ಹಿನ್ನಲೆಯಲ್ಲಿ ರಾಜ್ಯ ಮಟ್ಟದಲ್ಲಿ ಜ.25 ರಂದು ಬೆಂಗಳೂರು ಇಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಗಿತ್ತು.
ಈ ಸಂದರ್ಭದಲ್ಲಿ ರಾಜ್ಯ ಮಟ್ಟದಲ್ಲಿ ವಿವಿಧ ವಿಭಾಗಗಲ್ಲಿ ಅಧಿಕಾರಿ ಸಿಬ್ಬಂದಿಗಳನ್ನು ಆಯ್ಕೆ ಮಾಡಲಾಗಿದ್ದು, ಅದರಂತೆ “ಜಿಲ್ಲಾ ಚುನಾವಣಾಧಿಕಾರಿ” ವಿಭಾಗದಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಆಯ್ಕೆಯಾಗಿದ್ದು, ಬುಧವಾರದಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ರಾಜ್ಯಪಾಲರಿಂದ ಪ್ರಶಸ್ತಿ ಪತ್ರವನ್ನು ಸ್ವೀಕರಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಕೂರ್ಮಾ ರಾವ್, ಈ ಪ್ರಶಸ್ತಿ ಪಡೆಯುವಲ್ಲಿ ಜಿಲ್ಲೆಯ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳ (ಬಿಎಲ್ಒ),ಮತಗಟ್ಟೆ ಮಟ್ಟದ ಅಧಿಕಾರಿಗಳ ಮೇಲ್ವಿಚಾರಕರ, ಸಹಾಯಕ ಮತದಾರರ ನೋಂದಣಾಧಿಕಾರಿಗಳ, ಮತದಾರರ ನೋಂದಣಿ ಅಧಿಕಾರಿಯವರ, ಸ್ವೀಪ್ ತಂಡ, ಕಾಲೇಜು ಪ್ರಾಂಶುಪಾಲರುಗಳು, ಜಿಲ್ಲೆಯ ಚುನಾವಣಾ ಶಾಖೆಯ ಅಧಿಕಾರಿ, ಸಿಬ್ಬಂದಿಗಳು ಮತ್ತು ಜಿಲ್ಲೆಯಲ್ಲಿ ಹೊಸದಾಗಿ ಮತದಾರರ ಪಟ್ಟಿಗೆ ನೋಂದಣಿ ಮಾಡಿಕೊಂಡ ಯುವ ಮತದಾರರು ಮತ್ತು ಎಲ್ಲಾ ಜಿಲ್ಲೆಯ ಮತದಾರರ ಶ್ರಮವಿದೆ. ತಮ್ಮೆಲ್ಲರನ್ನು ತಂಬು ಹೃದಯದಿಂದ ಅಭಿನಂದಿಸುತ್ತೇನೆ ಹಾಗೂ ಮುಂಬರುವ ಚುನಾವಣಾ ಪ್ರಕ್ರಿಯೆಗಳಲ್ಲಿ ಸಹ ತಮ್ಮ ಸಹಕಾರವನ್ನು ಬಯಸುತ್ತೇನೆ ಎಂದು ತಿಳಿಸಿದ್ದಾರೆ.