ಮಾ. 28 ರಿಂದ ಏ.8: ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಹಿನ್ನೆಲೆ ನಿಷೇಧಾಜ್ಞೆ ಜಾರಿಗೊಳಿಸಿದ ಜಿಲ್ಲಾಧಿಕಾರಿ

ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ (Loksabha Elections) ಸಂಬಂಧಿಸಿದಂತೆ ಉಡುಪಿ ಲೋಕಸಭಾ ಚುನಾವಣೆಗೆ ಮಾರ್ಚ್ 28 ರಿಂದ ಏಪ್ರಿಲ್ 4 ರ ವರೆಗೆ ನಾಮಪತ್ರ ಸಲ್ಲಿಕೆ, ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 8 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಸದರಿ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿರುವುದರಿಂದ ನಾಮಪತ್ರ ಸಲ್ಲಿಕೆ, ಪರಿಶೀಲನೆ ಹಾಗೂ ನಾಮಪತ್ರಗಳನ್ನು ಹಿಂಪಡೆಯುವ ಕಾರ್ಯಗಳು ಸುಗಮ ಮತ್ತು ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮಾ. 28 ರ ಬೆಳಗ್ಗೆ 6 ಗಂಟೆಯಿಂದ ಏ. 8 ರ ಸಂಜೆ 6 ಗಂಟೆವರೆಗೆ ಸಿ.ಆರ್.ಪಿ.ಸಿ ಸೆಕ್ಷನ್ 144 ಮತ್ತು ಕರ್ನಾಟಕ ಪೊಲೀಸ್ ಅಧಿನಿಯಮ 1963 ರ ಕಲಂ 35 ರಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದ 100 ಮೀಟರ್ ವ್ಯಾಪ್ತಿಯ ಸುತ್ತ ಈ ಕೆಳಕಂಡ ಷರತ್ತುಗಳನ್ನು ವಿಧಿಸಿ, ನಿಷೇದಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕೆ ವಿದ್ಯಾಕುಮಾರಿ (DC Udupi) ಆದೇಶಿಸಿರುತ್ತಾರೆ.

ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಸಮಯದಲ್ಲಿ ನಿಷೇಧಿತ 100 ಮೀಟರ್ ಪರಿಧಿಯಲ್ಲಿ ಅಭ್ಯರ್ಥಿಯ ವಾಹನವನ್ನು ಒಳಗೊಂಡಂತೆ ಗರಿಷ್ಠ 3 ವಾಹನಗಳಿಗೆ ಮಾತ್ರ ಕಛೇರಿ ಅವರಣದಲ್ಲಿ ನಿಲುಗಡೆಗೆ ಅನುಮತಿ ನೀಡಲಾಗಿದೆ. ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಸಮಯದಲ್ಲಿ ನಿಷೇಧಿತ 100 ಮೀಟರ್ ಪರಿಧಿಯಲ್ಲಿ ಚುನಾವಣಾಧಿಕಾರಿಗಳ ಕಛೇರಿಯನ್ನು ಪ್ರವೇಶಿಸಲು ಅಭ್ಯರ್ಥಿಯನ್ನೂ ಒಳಗೊಂಡತೆ ಗರಿಷ್ಟ 05 ಜನರಿಗೆ ಮಾತ್ರ ಅನುಮತಿ ನೀಡಿಲಾಗಿದೆ.

ಐದು ಮಂದಿಗಿಂತ ಹೆಚ್ಚು ಮಂದಿ ಗುಂಪುಗಾರಿಕೆ ನಡೆಸುವುದು, ಆಯುಧ/ಶಸ್ತ್ರಾಸ್ತ್ರಗಳು ಮತ್ತು ಮಾರಕಾಸ್ತ್ರಗಳನ್ನು ಹೊತ್ತು ತಿರುಗುವುದನ್ನು ನಿರ್ಭಂದಿಸಲಾಗಿದೆ. ನಾಮಪತ್ರ ಸಲ್ಲಿಸುವ ಕೇಂದ್ರದ ನಿಷೇಧಿತ 100 ಮೀಟರ್ ಪರಿದಿಯಲ್ಲಿ ಚುನಾವಣೆ ಕಾರ್ಯದ ಮೇಲೆ ನಿರತರಾಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ಅಭ್ಯರ್ಥಿಗಳು, ಅನುಮತಿ ಹೊಂದಿದ ರಕ್ಷಣಾ ಇಲಾಖೆಯವರು ಹಾಗೂ ಅನುಮತಿ ಪಡೆದ ಮಾಧ್ಯಮದವರು ಹೊರತುಪಡಿಸಿ ಉಳಿದ ಎಲ್ಲಾ ತರಹದ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಯಾವುದೇ
ರೀತಿಯ ಘೋಷಣೆ ಕೂಗುವುದು, ಪಟಾಕಿ ಸಿಡಿಸುವುದು, ಮೆರವಣಿಗೆ ನಡೆಸುವುದು ಹಾಗೂ ಶಾಂತಿ ಶಿಸ್ತು ಪಾಲನೆಗೆ ಭಂಗ ತರುವ ರೀತಿಯಲ್ಲಿ ವರ್ತಿಸಬಾರದು. ಸಾರ್ವಜನಿಕ ಆಸ್ತಿಗಳನ್ನು ವಿರೂಪಗೊಳಿಸುವುದಾಗಲಿ ಅಥವಾ ನಷ್ಟಗೊಳಿಸುವುದನ್ನಾಗಲಿ ಮಾಡುವಂತಿಲ್ಲ. ಈ ಆದೇಶವು ಪೊಲೀಸ್ ಅಧಿಕಾರಿಗಳಿಗೆ ಹಾಗೂ ಚುನಾವಣಾ ಕಾರ್ಯನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ. ಈ ಮೇಲ್ಕಂಡ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ 188 ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.