ಉಡುಪಿ : ಸಮಾನತೆ ಚಿಹ್ನೆ ಆಗಿರುವ ಮತದಾನವನ್ನು ಹಬ್ಬದಂತೆ ಆಚರಿಸಬೇಕು. ಮತದಾನದ ಜಾಗೃತಿಗಾಗಿ ಆಯೋಜಿಸಿದ ಕಾರ್ಯಕ್ರಮಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮತದಾರರಿಗೆ ಹೇಳಿದರು.
ಅವರು ಶನಿವಾರ ಬ್ರಹ್ಮಗಿರಿಯ ಬಾಲಭವನದಲ್ಲಿ, ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಡೆದ ವಿಕಲಚೇತನ ಮತದಾರರಿಗೆ ಮತದಾನದ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಿಂದಿನ ಚುನಾವಣೆಯಲ್ಲಿ ಮತ ಚಲಾಯಿಸದೆ ಹೊರಗುಳಿದಿರುವವರನ್ನು ಗುರುತಿಸಿ ಅವರಿಗೆ ಮನವರಿಕೆ ಮಾಡಿ ಈ ಬಾರಿ ಮತಚಲಾಯಿಸುವಂತೆ ಮತದಾನದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ವಿಕಲ ಚೇತನರು ಹಾಗೂ ಮಹಿಳೆಯರನ್ನು ಮತಗಟ್ಟೆಗೆ ಕರೆ ತರುವ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಸಿಂಧೂ ಬಿ.ರೂಪೇಶ್ ಮಾತನಾಡಿ, ಯಾರಿಗೂ ಭೇಧ ಭಾವ ಮಾಡದೆ 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾನ ಮಾಡುವ ಅವಕಾಶ ಸಂವಿಧಾನ ನೀಡಿದೆ. ಆದರೆ ಗುರುತಿನ ಚೀಟಿ ಹೊಂದಿರುವ ಪ್ರತಿಯೊಬ್ಬರೂ ಮತದಾನ ಮಾಡುವುದಿಲ್ಲ. ಪ್ರತೀ ವರ್ಷ ಮತದಾನ ಮಾಡುವವರ ಸಂಖ್ಯೆ ಹೆಚ್ಚಾಗಬೇಕು ಎಂಬ ಕಾರಣಕ್ಕಾಗಿ ಕಳೆದ ಬಾರಿ ಕಡಿಮೆ ಮತದಾನವಾದ ಪ್ರದೇಶದಲ್ಲಿ ಮತದಾನದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ವಿವಿ ಪ್ಯಾಟ್ ಹಾಗೂ ಇವಿಯಂ ಮತಯಂತ್ರದ ಕಾರ್ಯ ವೈಖರಿ ಬಗ್ಗೆ ಮಾಹಿತಿ ನೀಡಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿಂಧೂ ಬಿ.ರೂಪೇಶ್ ಮತದಾನದ ಪ್ರತಿಜ್ಞಾ ವಿಧಿ ಭೋಧಿಸಿದರು. ವಿಶೇಷ ಚೇತನರಿಂದ ಮತದಾನ ಜಾಗೃತಿಯ ಕಿರು ನಾಟಕ ಪ್ರದರ್ಶನ ಹಾಗೂ ಮತದಾನ ಮತ್ತು ಮತಎಣಿಕೆಯ ಪ್ರಾತ್ಯಕ್ಷಿಕೆ ನಡೆಯಿತು.
ತಾ. ಪಂ. ಇಒ ರಾಜು ಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್ ಉಪಸ್ಥಿತರಿದ್ದರು. ಹರಿಕೃಷ್ಣ ಶಿವತ್ತಾಯ ಕಾರ್ಯಕ್ರಮ ನಿರೂಪಿಸಿದರು.