ಉಡುಪಿ:ಬಾಲ ಕಾರ್ಮಿಕ ಮುಕ್ತ ಉಡುಪಿ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರೂ ಕೈ ಜೋಡಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ


ಉಡುಪಿ: ಬಾಲಕಾರ್ಮಿಕ ಪದ್ಧತಿಯು ಸಮಾಜದ ಅನಿಷ್ಠ ಪದ್ಧತಿಯಾಗಿದ್ದು, ಅದನ್ನು ತಳ ಮಟ್ಟದಲ್ಲಿ ನಿರ್ಮೂಲನೆ ಮಾಡಿ, ಉಡುಪಿಯನ್ನು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬ ನಾಗರಿಕರು ಕೈಜೋಡಿಸಬೇಕು ಎಂದು
ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ
ಯೋಜನಾ ಸಂಘ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಸಮಾಜದಲ್ಲಿ ಬಾಲಕಾರ್ಮಿಕ ಪದ್ಧತಿ ಹಾಗೂ ಬಾಲ್ಯವಿವಾಹದಂತಹ ಅನಿಷ್ಠ ಪದ್ಧತಿಗಳು ಮಕ್ಕಳು ಬಾಲ್ಯ ವ್ಯವಸ್ಥೆಯನ್ನು ಸವಿಯುವುದನ್ನು ಮೊಟಕುಗೊಳಿಸುವುದರ ಜೊತೆಗೆ ಶಿಕ್ಷಣ ವಂಚಿತರಾಗುತ್ತಾರೆ. ಒತ್ತಾಯ ಪೂರ್ವಕವಾಗಿ ಮಕ್ಕಳು ದುಡಿಮೆಗಳಲ್ಲಿ ತೊಡಗಿಕೊಳ್ಳುವುದರಿಂದ ಅವರ ಮಾನಸಿಕ ಹಾಗೂ ದೈಹಿಕ ಬೆಳವಣಿಗೆ ಕುಂಠಿತವಾಗುವುದರ ಜೊತೆಗೆ ಮಗು ಅನೇಕ ಪರಿಣಾಮವನ್ನು ಎದುರಿಸಿ, ಮುಂದೆ ಸಮಾಜಘಾತುಕ ವ್ಯಕ್ತಿಯಾಗಿ ಬದಲಾಗುವ ಸಾಧ್ಯತೆಗಳಿರುತ್ತದೆ. ಆದ್ದರಿಂದ ಇದಕ್ಕೆ ಅವಕಾಶ ಕಲ್ಪಿಸಬಾರದು
ಎಂದರು.

ಹದಿನಾಲ್ಕು ವರ್ಷದ ಒಳಗಿನ ಮಕ್ಕಳನ್ನು ಯಾವುದೇ ಕೆಲಸದಲ್ಲಿ ನೇಮಿಸಿಕೊಳ್ಳುವಂತಿಲ್ಲ. 14 ರಿಂದ 18 ವರ್ಷದ ಒಳಗಿನ ಕಿಶೋರ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ತೊಡಗಿಸಿಕೊಳ್ಳುವಂತಿಲ್ಲ ಎಂದು ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆಯಲ್ಲಿ ನಿಯಮವಿದೆ. ಇದನ್ನು ಗಮನಿಸದೆ ಕೆಲವರು ಮಕ್ಕಳನ್ನು ನಿಯೋಜಿಸಿಕೊಳ್ಳುತ್ತಾರೆ. ಕೆಲಸಕ್ಕೆ ನೇಮಿಸಿಕೊಳ್ಳುವ
ಮಾಲೀಕರ ವಿರುದ್ಧ ಹಾಗೂ ಮಕ್ಕಳ ಪೋಷಕರನ್ನು ಸಹ ಶಿಕ್ಷಸಲು ಕಾನೂನಿನಲ್ಲಿ ಅವಕಾಶವಿದೆ ಎಂದರು.

ಈ ಹಿಂದೆ ಜಿಲ್ಲೆಯಲ್ಲಿ ಪತ್ತೆಯಾದ ಬಾಲ ಕಾರ್ಮಿಕರನ್ನು ರಕ್ಷಿಸಿ, ಅವರುಗಳಿಗೆ ಪುನರ್ವಸತಿ ಕಲ್ಪಿಸುವುದರೊಂದಿಗೆ ವಿದ್ಯಾಭ್ಯಾಸ
ಸೇರಿದಂತೆ ಮತ್ತಿತರರು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದ ಅವರು, ಮಕ್ಕಳು ತಮ್ಮ ಬಾಲ್ಯವನ್ನು ಅನುಭವಿಸಲು ಪೂರಕ ವಾತಾವರಣ ಕಲ್ಪಿಸುವುದು ಸಮಾಜದ ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕರ ಜವಾಬ್ದಾರಿಯಾಗಿದೆ ಎಂದರು.

ಜಿಲ್ಲೆಯು ಶೈಕ್ಷಣಿಕವಾಗಿ ಮುಂದುವರೆದಿದ್ದರೂ ಸಹ ಈವರೆಗೆ ಸುಮಾರು 62 ಬಾಲ್ಯ ವಿವಾಹ ಪ್ರಕರಣಗಳು ಪತ್ತೆಯಾಗಿವೆ. ಹದಿನೆಂಟುವರ್ಷದ ಒಳಗಿನ ಹೆಣ್ಣು ಮಕ್ಕಳಿಗೆ ಮದುವೆ ಮಾಡುವುದರಿಂದ ಅವರುಗಳು ಭೌತಿಕವಾಗಿ ಪ್ರಭುದ್ದರಾಗಿರುವುದಿಲ್ಲ. ಅವರ ಚಿಂತನೆಗಳು
ಭಿನ್ನವಾಗಿರುತ್ತವೆ. ಆದ್ದರಿಂದ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ಪದ್ಧತಿಗಳು ಆಗುತ್ತಿರುವ ಬಗ್ಗೆ ಮಾಹಿತಿ ದೊರೆತಲ್ಲಿ ಸ್ಥಳೀಯ ಪೊಲೀಸರಿಗೆ ಅಥವಾ ಕಾರ್ಮಿಕ ನಿರೀಕ್ಷರುಗಳಿಗೆ ಮಾಹಿತಿ ನೀಡುವುದರೊಂದಿಗೆ ಈ ಎರಡು ಸಾಮಾಜಿಕ ಪಿಡುಗು ನಿರ್ಮೂಲನೆಗೆ ಸಹಕರಿಸಬೇಕು ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತನಾಡಿ, ಅಂದಿನ ಕಾಲಘಟ್ಟದಲ್ಲಿ ಬಡತನದಿಂದಾಗಿ ಮಕ್ಕಳು ಶಿಕ್ಷಣದಿಂದ ವಂಚಿತರಾಗುವುದರೊಂದಿಗೆ, ಪೋಷಕರ ನೆರವಿವಾಗಿ ಅನೇಕ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಿದ್ದರು. ಇದನ್ನು ಅರಿತ ಸರಕಾರ ಮಕ್ಕಳಿಗೂ ಸಹ ಬದುಕುವ ಹಕ್ಕಿದೆ ಎಂಬ ನಿಟ್ಟಿನಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆಯನ್ನು ಜಾರಿಗೆ ತಂದು, ಮಕ್ಕಳು ಶಿಕ್ಷಣವಂತರಾಗಿ, ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಲು ಅನೇಕ ಯೋಜನೆಗಳನ್ನು ರೂಪಿಸಿದೆ, ಮಕ್ಕಳು ಇದರ
ಸದುಪಯೋಗ ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ ಶಂಕರ ಮಾತನಾಡಿ, ಕೆಲವು ಮಕ್ಕಳು ತಮ್ಮ ಕುಟುಂಬದ ಅಸಹಾಯಕತೆಯಿಂದಾಗಿ ಬಾಲ ಕಾರ್ಮಿಕರಾಗುತ್ತಾರೆ. ಆ ಸಂದರ್ಭದಲ್ಲಿ ಅನೇಕ ಸಮಸ್ಯೆಗಳನ್ನೂ ಸಹ ಎದುರಿಸುತ್ತಾರೆ. ಬಾಲ ಕಾರ್ಮಿಕರು ದುಡಿಯುತ್ತಿರುವುದು ಕಂಡು ಬಂದಲ್ಲಿ ನಾವು ಏಕೆ ರಕ್ಷಿಸಬೇಕು. ಬೇರೆಯವರು ರಕ್ಷಿಸುತ್ತಾರೆ ಎಂಬುದನ್ನು ಬಿಟ್ಟು ಅಮಾಯಕ ಮಕ್ಕಳ ರಕ್ಷಣೆ ನಮ್ಮ ಜವಾಬ್ದಾರಿ ಎಂದು ಅರಿತು ಅವರ ರಕ್ಷಣೆಗೆ ಮುಂದಾಗಬೇಕು ಎಂದ ಅವರು, ಹೊರ ಜಿಲ್ಲೆಯಿಂದ ಬಂದಿರುವ ಮಕ್ಕಳು ಎಂದು ನಿರ್ಲಕ್ಷಿಸಬಾರದು ಎಂದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ವೈಕುಂಠ ಬಾಳಿಕಾ ಕಾನೂನು ವಿದ್ಯಾಲಯದ ಪ್ರಾಧ್ಯಾಪಕ ಹಾಗೂ ವಕೀಲ ರಾಯಲ್ ಫರ್ನಾಂಡೀಸ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಮತ್ತು ತಿದ್ದುಪಡಿ ಕಾಯ್ದೆ 2016 ರ ಕುರಿತು ಮಾಹಿತಿ ನೀಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೀಶ್ ಪಿ.ಆರ್ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ ನಾಯಕ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧ ಹಾದಿಮನೆ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕಿ ಅಮೃತ ಸ್ವಾಗತಿಸಿ, ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿ, ವಂದಿಸಿದರು.