ಉಡುಪಿ: ಮಾದಕ ದ್ರವ್ಯ ಸಾಗಾಟ-ಮಾರಾಟ; ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ

ಉಡುಪಿ: ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಚಟುವಟಿಕೆಗಳಲ್ಲಿ ಪದೇಪದೇ ತೊಡಗಿಸಿಕೊಂಡ ಆರೋಪದ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಡಗಬೆಟ್ಟು ಕೊಳಂಬೆ ಮಿಷನ್ ಕಂಪೌಂಡ್ ನಿವಾಸಿ ಇಕ್ಬಾಲ್ ಅಲಿಯಾಸ್ ಇಕ್ಬಾಲ್ ಶೇಖ್ (34) ಎಂಬಾತನನ್ನು ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿ ಆಧರಿಸಿ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರು ಆ.13ರಂದು ಬಂಧನ ಆದೇಶ ಹೊರಡಿಸಿದ್ದರು. ಅದರಂತೆ ಪೊಲೀಸರು ಇಕ್ಬಾಲ್‌ನನ್ನು ಬಂಧಿಸಿದ್ದಾರೆ.

ಆರೋಪಿಯ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಮೂರು ಹಾಗೂ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎರಡು ಸೇರಿದಂತೆ ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಒಟ್ಟು ಐದು ಪ್ರಕರಣಗಳು ದಾಖಲಾಗಿವೆ.

ಈ ಪ್ರಕರಣಗಳು ನ್ಯಾಯಾಲಯದ ವಿಚಾರಣೆಯಲ್ಲಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ ಮಣಿಪಾಲ ಮತ್ತು ಉಡುಪಿ ನಗರ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದ್ದು, ಎರಡೂ ಪ್ರಕರಣಗಳಲ್ಲಿ ಆರೋಪಿಗೆ ಶಿಕ್ಷೆಯಾಗಿದೆ.

ಮಾದಕ ದ್ರವ್ಯ ಚಟುವಟಿಕೆಗಳಲ್ಲಿ ಪದೇಪದೇ ತೊಡಗಿಸಿಕೊಂಡ ಹಿನ್ನೆಲೆಯಲ್ಲಿ ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಬಂಧಿಸಲಾಗಿರುವ ಇಕ್ಬಾಲ್‌ನನ್ನು ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶಿಸಲಾಗಿದೆ.