ಉಡುಪಿಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆ: ತಗ್ಗು ಪ್ರದೇಶಗಳು ಜಲಾವೃತ

ಉಡುಪಿ: ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಉಡುಪಿಯ ನಗರದ ಕೆಲ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.
ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಶ್ರೀಕೃಷ್ಣಮಠದ ಪಾರ್ಕಿಂಗ್ ಪ್ರದೇಶ ಸಹಿತ ಮೂಡನಿಡಂಬೂರು, ಬೈಲಕೆರೆ, ಕಲ್ಸಂಕ, ಗುಂಡಿಬೈಲು ಮೊದಲಾದ ತಗ್ಗುಪ್ರದೇಶಗಳಿಗೆ ನೀರು ನುಗ್ಗಿದೆ. ಹಾಗೆ ನಗರದ ಹೊರವಲಯದ ಕೆಮ್ತೂರು, ಉದ್ಯಾವರ, ಬೊಳ್ಜೆ ಮೊದಲಾದ ತಗ್ಗುಪ್ರದೇಶಗಳು ಜಲಾವೃತವಾಗಿವೆ.
ನಗರದ ಪ್ರಮುಖ ರಸ್ತೆಗಳಲ್ಲಿ ನೀರಿ ಹರಿಯುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಎಡೆಬಿಡದೆ ಮಳೆಯಾಗುತ್ತಿರುವುದರಿಂದ ಜನರ ಸಂಚಾರವು ವಿರಳವಾಗಿದೆ. ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಈ ಹಿನ್ನೆಲೆಯಲ್ಲಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.