ಉಡುಪಿ: ಡೈರಿ ಫಾರ್ಮ್, ಗೋಶಾಲೆಗಳ ನೋಂದಣಿಗೆ ಸೂಚನೆ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ಹೈನುಗಾರಿಕೆ ತಾಣಗಳು ಹಾಗೂ ಗೋಶಾಲೆಗಳ ಬಗ್ಗೆ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಜಿಲ್ಲೆಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸಲ್ಲಿಸಬೇಕು ಎಂದು ನಗರಸಭೆಯ ಪೌರಾಯುಕ್ತ ಆನಂದ್ ಕಲ್ಲೋಳಿಕರ್ ಸೂಚಿಸಿದ್ದಾರೆ.

ನಗರಸಭಾ ವ್ಯಾಪ್ತಿಯಲ್ಲಿರುವ ಎಲ್ಲಾ ಹೈನುಗಾರಿಕೆ ತಾಣಗಳು ಹಾಗೂ ಗೋಶಾಲೆಗಳು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆನ್‌ಲೈನ್ ಮೂಲಕ ನೊಂದಣಿ ಮಾಡಿಕೊಳ್ಳಬೇಕು ಅಥವಾ ಆನ್‌ಲೈನ್ ನೋಂದಣಿ ಮಾಡಿಕೊಳ್ಳುವವರೆಗೆ ಆಫ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು.

10 ಕ್ಕಿಂತ ಹೆಚ್ಚು ಪ್ರಾಣಿಗಳನ್ನು ಹೊಂದಿರುವ ಡೈರಿ ಫಾರ್ಮ್ ಗಳು ಹಾಗೂ ಗೋಶಾಲೆಗಳನ್ನು ಸ್ಥಾಪಿಸಲು ಹಾಗೂ ಕಾರ್ಯ ನಿರ್ವಹಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಜಲ ಹಾಗೂ ವಾಯು ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾಯ್ದೆ ಅಡಿಯಲ್ಲಿ ಒಪ್ಪಿಗೆಯನ್ನು ಪಡೆಯಬೇಕು.

ಎಲ್ಲಾ ಡೈರಿ ಫಾರ್ಮ್ ಗಳು ಹಾಗೂ ಗೋಶಾಲೆಗಳು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾರ್ಗಸೂಚಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದನ್ನು ನಗರ ಸ್ಥಳೀಯ ಸಂಸ್ಥೆಗಳು ಅಥವಾ ಮಾಲಿನ್ಯ ನಿಯಂತ್ರಣ ಮಂಡಳಿಯು ಖಚಿತಪಡಿಸಿಕೊಳ್ಳಬೇಕು.
ಹೈನುಗಾರಿಕೆ ತಾಣಗಳನ್ನು ಹಾಗೂ ಗೋಶಾಲೆಗಳನ್ನು ನಿರ್ವಹಿಸುತ್ತಿರುವವರು ಒಂದು ವಾರದಲ್ಲಿ ನೊಂದಣಿ ಮಾಡಿಕೊಳ್ಳುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.