ಉಡುಪಿ: ಆ. 19ಕ್ಕೆ ಜನಾಶೀರ್ವಾದ ಯಾತ್ರೆಯ ಸಮಾವೇಶ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಅಭಿನಂದನೆ; ಕುಯಿಲಾಡಿ

ಉಡುಪಿ: ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಶಯದಂತೆ ದೇಶಾದ್ಯಂತ ಕೇಂದ್ರ ಸಚಿವರ ನೇತೃತ್ವದಲ್ಲಿ ನೂತನ ಕೇಂದ್ರ ಸಚಿವರನ್ನು ಪರಿಚಯಿಸುವ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಪ್ರಚಲಿತಗೊಳಿಸುವ ನಿಟ್ಟಿನಲ್ಲಿ “ಜನಾಶೀರ್ವಾದ ಯಾತ್ರೆ”ಯು ಇಂದಿನಿಂದ ಆರಂಭಗೊಂಡಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಉಡುಪಿ ಜಿಲ್ಲಾ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕರ್ನಾಟಕ ರಾಜ್ಯದಾದ್ಯಂತ ನಾಲ್ಕು ಕೇಂದ್ರ ಸಚಿವರ ನೇತೃತ್ವದಲ್ಲಿ ನಡೆಯುತ್ತಿರುವ ಜನಾಶೀರ್ವಾದ ಯಾತ್ರೆಯು ಉಡುಪಿ ಜಿಲ್ಲೆಗೆ ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಆಗಸ್ಟ್ 18ರಂದು ಸಂಜೆ ಜಿಲ್ಲಾ ವ್ಯಾಪ್ತಿಯ ಹೆಬ್ರಿಗೆ ಆಗಮಿಸಲಿದೆ. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನೂತನ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಜನಾಶೀರ್ವಾದ ಯಾತ್ರೆಯನ್ನು ಸ್ವಾಗತಿಸಲಾಗುವುದು ಎಂದು ಅವರು ಹೇಳಿದರು.

ಆಗಸ್ಟ್ 19ರಂದು ಬೆಳಿಗ್ಗೆ 11ಕ್ಕೆ ಉಡುಪಿ ಪುರಭವನದಲ್ಲಿ ಜನಾಶೀರ್ವಾದ ಯಾತ್ರೆಯ ಸಮಾವೇಶ ಹಾಗೂ ನೂತನ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಅಭಿನಂದನಾ ಸಮಾರಂಭ ನಡೆಯಲಿದೆ. ಜಿಲ್ಲೆಯ ನೂತನ ಸಚಿವರು, ಶಾಸಕರು, ಪಕ್ಷದ ಮುಖಂಡರು ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಕುಯಿಲಾಡಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಮತ್ತು ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಉಪಸ್ಥಿತರಿದ್ದರು.