ಉಡುಪಿ: ರಕ್ಷಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥ ಖಾಸಗಿ ಆಸ್ಪತ್ರೆಯ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಮೃತ ರಕ್ಷಾ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಒತ್ತಾಯಿಸಿದ್ದಾರೆ.
ಖಾಸಗಿ ಆಸ್ಪತ್ರೆಗಳು ತಮ್ಮ ವೈಫಲ್ಯತೆಯನ್ನು ಮುಚ್ಚಿಹಾಕಲು ಕೊರೊನಾ ಹೆಸರಿನಲ್ಲಿ ಜನರನ್ನು ಬೆದರಿಸುವ ಕೆಲಸ ಮಾಡುತ್ತಿದೆ. ಮೃತದೇಹಗಳನ್ನು ಹಸ್ತಾಂತರ ಮಾಡುವಾಗಲೂ ಎಡವಟ್ಟುಗಳನ್ನು ಮಾಡುತ್ತಿದೆ. ಖಾಸಗಿ ಆಸ್ಪತ್ರೆಗಳು ಜನರ ಜೀವದೊಂದಿಗೆ ಚೆಲ್ಲಾಟವಾಡುತ್ತಿರುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಇದರ ಪರಿಣಾಮವನ್ನು ಎದುರಿಸಬೇಕಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.
ಮುಂದಿನ ದಿನಗಳಲ್ಲಿ ಯಾರಿಗೂ ಈ ರೀತಿ ಅನ್ಯಾಯ ಆಗದಂತೆ ಜಿಲ್ಲಾಡಳಿತ ಎಚ್ಚರವಹಿಸಬೇಕು. ಕೊರೊನಾದಿಂದ ಭಯಭೀತರಾಗಿರುವ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.