ಉಡುಪಿ: ಪ್ರಸ್ತುತ ಬ್ಯಾಂಕಿಂಗ್ ಕ್ಷೇತ್ರ ಆಧುನಿಕ ವ್ಯವಸ್ಥೆಯತ್ತ ಸಾಗುತ್ತಿದ್ದು, ಸಹಕಾರಿ ಸಂಸ್ಥೆಗಳು ರಾಷ್ಟ್ರೀಕೃತ ಬ್ಯಾಂಕ್ಗಳಂತೆ ಆನ್ಲೈನ್ ವ್ಯವಹಾರ ನಡೆಸಲು ಮುಂದಾಗಬೇಕು ಎಂದು ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಎ. ಸುವರ್ಣ ಹೇಳಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಉಡುಪಿ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಮಂಗಳೂರು, ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಹಾಗೂ ಸಹಕಾರ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಮೀನುಗಾರರ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಉಡುಪಿ ಬಡಗಬೆಟ್ಟು ಸೊಸೈಟಿಯ ಜಗನ್ನಾಥ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಕೌಶಲ ಅಭಿವೃದ್ಧಿ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಸಹಕಾರಿ ಸಂಸ್ಥೆಗಳು ರಾಷ್ಟ್ರೀಕೃತ ಬ್ಯಾಂಕ್ಗಳಿಗೆ ಪೈಪೋಟಿ ನೀಡುವ ಜತೆಗೆ ಪಾರದರ್ಶಕ ಹಾಗೂ ಗುಣಮಟ್ಟದ ಸೇವೆ ನೀಡಲು ಹೆಚ್ಚಿನ ಒತ್ತು ನೀಡಬೇಕು. ಹಾಗೆಯೇ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸಹಕಾರಿ ಸಂಸ್ಥೆಗಳು ಮುಂದಿನ ಏಪ್ರಿಲ್ನಿಂದ ಪೂರ್ಣ ಪ್ರಮಾಣದ ಕಾಗದ ರಹಿತ ವ್ಯವಹಾರ ಆರಂಭಿಸಿ, ಗ್ರಾಹಕರನ್ನು ಸಹಕಾರಿ ಕ್ಷೇತ್ರದತ್ತ ಸೆಳೆಯಬೇಕು ಎಂದು ಕರೆನೀಡಿದರು.
ಅಧ್ಯಕ್ಷತೆ ವಹಿಸಿದ್ದ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಸರ್ಕಾರಿ ಹಾಗೂ ಕೆಲ ಅಧಿಕಾರಿಗಳ ಧೋರಣೆಯಿಂದಾಗಿ ಸಹಕಾರಿ ಕ್ಷೇತ್ರ ಸವಾಲುಗಳನ್ನು ಎದುರಿಸುತ್ತಿದೆ. ಈ ಬಗ್ಗೆ ಜಿಲ್ಲಾ ಸಹಕಾರಿ
ಯೂನಿಯನ್ ನಿರಂತರ ಹೋರಾಟ ನಡೆಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದರು.
ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ವ್ಯವಸ್ಥಾಪಕ ನಿರ್ದೇಶಕ ಹರೀಶ್ ಕುಮಾರ್, ಉಡುಪಿ ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕ ಪ್ರವೀಣ್ ಬಿ. ನಾಯಕ್, ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಎಂ.ಜೆ. ಚಂದ್ರಪ್ರತಿಮಾ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ನ ಉಪಾಧ್ಯಕ್ಷ ಅಶೋಕ್ ಕುಮಾರ್ ಬಲ್ಲಾಳ್, ನಿರ್ದೇಶಕರಾದ ಕಟಪಾಡಿ ಶಂಕರ ಪೂಜಾರಿ, ಕೆ. ಕೊರಗ ಪೂಜಾರಿ, ಹರೀಶ್ ಕಿಣಿ, ಮನೋಜ್ ಕರ್ಕೇರ, ದ.ಕ. ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ ಎನ್.ಜೆ. ಗೋಪಾಲ್ ಉಪಸ್ಥಿತರಿದ್ದರು.