ಉಡುಪಿ: ಜಿಲ್ಲೆಯಲ್ಲಿ ಕೋವಿಡ್ 19 ಹರಡುವುದನ್ನು ನಿಯಂತ್ರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಿ, ಸೋಂಕಿತರನ್ನು ಬೇಗ ಪತ್ತೆ ಹಚ್ಚುವುದು ಅಗತ್ಯವಿದ್ದು, ಇದಕ್ಕಾಗಿ ಪ್ರತಿ ದಿನ ಕನಿಷ್ಠ 10000 ರಿಂದ 12000 ಕೋವಿಡ್ ಪರೀಕ್ಷೆ ನಡೆಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.
ಅವರು ಸೋಮವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣ ಕುರಿತ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ ಮಾನ್ಯ ಮುಖ್ಯಮಂತ್ರಿಗಳ ಸೂಚನೆಯಂತೆ, ಜಿಲ್ಲೆಯಲ್ಲಿ ಸೋಂಕು ಹರಡುವುದನ್ನು ತಪ್ಪಿಸಲು ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ಗಳಿಗೆ ಸ್ಥಳಾಂತರಿಸಬೇಕು. ವೈದ್ಯಾಧಿಕಾರಿಗಳ ನಿರ್ಧಾರದ ಮೇಲೆ ಹೋಂ ಐಸೋಲೇಶನ್ ನಲ್ಲಿರುವ ಸೋಂಕಿತರ ಮನೆಯನ್ನು ಸೀಲ್ಡೌನ್ ಮಾಡಿ, ಸುತ್ತ ಮುತ್ತಲಿನ 4 ಮನೆಗಳನ್ನು ಸೇರಿಸಿ ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಿ. ಸೋಂಕಿತರು ಮತ್ತು ಅವರ ಸಂಪರ್ಕಿತರು ತಮ್ಮ ಮನೆಯ ವ್ಯಾಪ್ತಿಯನ್ನು ಬಿಟ್ಟು ಅನಾವಶ್ಯಕ ಸುತ್ತಾಡುವುದನ್ನು ನಿಯಂತ್ರಿಸಲು ಅಗತ್ಯ ಕ್ರಮಕೈಗೊಳ್ಳಿ, ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ಗೆ ಸ್ಥಳಾಂತರಿಸುವಾಗ, ಜನರ ಪ್ರತಿರೋಧ ಕಂಡುಬಂದಲ್ಲಿ ಪೊಲೀಸ್ ನೆರವು ಪಡೆಯುವಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ತಹಸೀಲ್ದಾರ್ಗಳು, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳಿಗೆ ಹಾಗೂ ಪೊಲೀಸ್ ಇಲಾಖೆಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.
ಸೋಂಕಿತರು ಕಂಡು ಬರುವ ಗ್ರಾಮಗಳ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು, ಸೋಂಕಿತರ ಮನೆಗೆ ಖುದ್ದು ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿ, ಅಗತ್ಯಕನುಗುಣವಾಗಿ ಆಸ್ಪತ್ರೆಗೆ ಅಥವಾ ಕೋವಿಡ್ ಕೇರ್ ಸೆಂಟರ್ಗೆ ಸ್ಥಳಾಂತರಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದರು.
ಸೋಂಕಿತರನ್ನು ಕೋವಿಡ್ ಕೇರ್ಸೆಂಟರ್ಗೆ ಶೀಘ್ರದಲ್ಲಿ ಸ್ಥಳಾಂತರಿಸಲು ಅನುಕೂಲವಾಗುವಂತೆ, ಪ್ರತೀ 2 ಗಂಟೆಗೊಮ್ಮೆ ಸೋಂಕಿತರ ಮಾಹಿತಿಯನ್ನು, ಸಂಬಂದಪಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಗೆ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಕೋವಿಡ್ ಕೇರ್ಸೆಂಟರ್ನಲ್ಲಿ ಈ ಹಿಂದಿನಂತೆಯೇ ಉತ್ತಮ ರೀತಿಯ ಊಟ ಮತ್ತು ಉಪಹಾರ ವ್ಯವಸ್ಥೆಯನ್ನು ಮಾಡುವಂತೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಕೋವಿಡ್ ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚುವ ಸಂದರ್ಭದಲ್ಲಿ ಪ್ರತೀ ಪಾಸಿಟಿವ್ ಪ್ರಕರಣಕ್ಕೆ 20ಕ್ಕಿಂತ ಹೆಚ್ಚು ಸಂಪರ್ಕಿತರನ್ನು ಪತ್ತೆ ಹಚ್ಚಿ ಪರೀಕ್ಷೆಗೆ ಒಳಪಡಿಸಿ, ಅದರಲ್ಲಿ ಕಡ್ಡಾಯವಾಗಿ 10ಕ್ಕಿಂತ ಹೆಚ್ಚು ಪ್ರಾಥಮಿಕ ಸಂಪರ್ಕಿತರು ಇರುವಂತೆ ನೋಡಿಕೊಳ್ಳಿ, ರೈಲುಗಳ ಮೂಲಕ ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವ ಪ್ರಯಾಣಿಕರ ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ವರದಿ ಪಡೆಯಲು ನೇಮಿಸಿರುವ ಅಧಿಕಾರಿಗಳು, ನೆಗೆಟಿವ್ ವರದಿ ಇಲ್ಲದೇ ಬರುವವರನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಕೋವಿಡ್-19 ಪ್ರಮಾಣವನ್ನು ಶೇ.1ಕ್ಕಿಂತ ಕಡಿಮೆಗೊಳಿಸಲು, ಟೆಸ್ಟಿಂಗ್, ಟ್ರೇಸಿಂಗ್ ಸೇರಿದಂತೆ ಎಲ್ಲಾ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಅಗತ್ಯವಿದ್ದು, ಈ ಬಗ್ಗೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರ ಚಂದ್ರ, ಡಿಹೆಚ್ಓ ಡಾ. ನಾಗಭೂಷಣ ಉಡುಪ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.