ಉಡುಪಿ: ಮುಂಬರುವ ಕರ್ನಾಟಕ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಡಿಕೆಶಿ ಬಿಡುಗಡೆ ಸೇರಿದಂತೆ ಇನ್ಯಾವುದೇ ವಿಷಯಗಳು ಇದರ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಮೀನುಗಾರಿಕೆ ಹಾಗೂ ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಉಡುಪಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಗಾಂಧೀಜಿಯ 150ನೇ ಜನ್ಮದಿನಾಚರಣೆ ಆಚರಿಸಿಕೊಂಡು, ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದೆ. ಆದರೆ ಕಾಂಗ್ರೆಸ್ ಗಾಂಧೀಜಿಯನ್ನು ಮರೆತು, ಜೈಲಿನಿಂದ ಬಿಡುಗಡೆಗೊಂಡವರ ಸಂಭ್ರಮಾಚರಣೆ ಮಾಡುವ ಮೂಲಕ ಜವಾಬ್ದಾರಿ ರಹಿತವಾಗಿ ನಡೆದುಕೊಳ್ಳುತ್ತಿದೆ. ಇದು ಕಾಂಗ್ರೆಸ್ ರಾಜಕೀಯ ವ್ಯವಸ್ಥೆಯಲ್ಲಿ ಅವನತಿಯ ಕೊನೆಯ ಘಟ್ಟ ತಲುಪಿದೆ ಎನ್ನುವುದನ್ನು ಸೂಚಿಸುತ್ತದೆ ಎಂದರು.
ಹಿಂದಿನ ಸರ್ಕಾರದ ಅವಧಿಯಲ್ಲಿ ಬೆಳಕು ಮೀನುಗಾರಿಕೆ ನಿಷೇಧ ಮಾಡಲಾಗಿದ್ದು, ನಾವು ಯಥಾಸ್ಥಿತಿ ಕಾಪಾಡಿಕೊಂಡು ಬಂದಿದ್ದೇವೆ. ಇದರಿಂದ ಪರ್ಸಿನ್ ಮೀನುಗಾರರಿಗೆ ನಷ್ಟ ಆಗಿರುವುದು ನಿಜ. ಅದನ್ನು ಸರಿಪಡಿಸಲು ಕಾನೂನಿನಲ್ಲಿ ತೊಡಕಿದೆ ಎಂದರು.
ಮಹಾರಾಷ್ಟ್ರದಲ್ಲಿ ಜನತೆ ಬಿಜೆಪಿ ಹಾಗೂ ಶಿವಸೇನೆ ಮೈತ್ರಿಗೆ ಸ್ಪಷ್ಟ ಬಹುಮತ ನೀಡಿದ್ದಾರೆ. ಹರಿಯಾಣದಲ್ಲಿ ಬಿಜೆಪಿಗೆ ನಿರೀಕ್ಷಿತ ಫಲಿತಾಂಶ ಬಂದಿಲ್ಲ. ಆದರೂ ಎರಡು ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂದರು.