ಉಡುಪಿ: ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಸರಕಾರವೇ ಮುನ್ನಡೆಸಲು ಆರೋಗ್ಯ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಗೃಹ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಅನಿವಾಸಿ ಭಾರತೀಯ ಉದ್ಯಮಿ ಬಿ.ಆರ್. ಶೆಟ್ಟಿಯವರ ಮಾಲೀಕತ್ವದ ಕಂಪೆನಿ ಈವರೆಗೂ ಆಸ್ಪತ್ರೆಯನ್ನು ನಡೆಸುತ್ತಿದ್ದು, ಸದ್ಯ ಕಂಪೆನಿ ಅರ್ಥಿಕ ಸಂಕಷ್ಟಕ್ಕೆ ಸಿಲುಕಿದ ಪರಿಣಾಮ ಆಸ್ಪತ್ರೆಯನ್ನು ನಿರ್ವಹಿಸಲು ಸಾಧ್ಯವಿಲ್ಲವೆಂದು ಸರಕಾರಕ್ಕೆ ಪತ್ರ ಬರೆದಿದ್ದಾರೆ. ಆದ್ದರಿಂದ ಆಸ್ಪತ್ರೆಯನ್ನು ಮತ್ತೆ ಸರ್ಕಾರದ ಸುಪರ್ದಿಗೆ ಪಡೆಯುವ ಬಗ್ಗೆ ಸಿಎಂ ಜೊತೆ ಚರ್ಚಿಸಲಾಗುವುದು ಎಂದರು.

ಈಗಾಗಲೇ ಇಲ್ಲಿರುವ 200 ಬೆಡ್‌ಗಳ ಪೈಕಿ 70 ಬೆಡ್‌ಗಳಿಗೆ ಬೇಕಾದ ಸಿಬ್ಬಂದಿಗಳನ್ನು ಈ ಹಿಂದೆಯೇ ನೇಮಕ ಮಾಡಲಾಗಿತ್ತು. ಉಳಿದ 130 ಬೆಡ್‌ಗಳಿಗೆ ಬೇಕಾದ ಸಿಬ್ಬಂದಿಗಳ ಹುದ್ದೆಯನ್ನು ಭರ್ತಿ ಮಾಡಲು ಕ್ರಮ ವಹಿಸಲಾಗುವುದು. ಕೋವಿಡ್ 3ನೇ ಅಲೆ ಎದುರಿಸುವಲ್ಲಿ ಜಿಲ್ಲಾಡಳಿತಕ್ಕೆ ಈ ಆಸ್ಪತ್ರೆ ನೆರವಾಗಲಿದೆ ಎಂದರು.


















