ಸಾರ್ವಜನಿಕರ ಸಮಸ್ಯೆ ಪರಿಹರಿಸಲು ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಅವರಿಗೆ ಮನವಿ

ಉಡುಪಿ: ನಗರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಉಡುಪಿ ನಗರಸಭೆಯ ಕಾಂಗ್ರೆಸ್‌ ಸದಸ್ಯರು ಸೋಮವಾರ ನೂತನ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರಿಗೆ ಮನವಿ ಸಲ್ಲಿಸಿದರು.
ಆನ್‌ಲೈನ್‌ ತಂತ್ರಾಂಶದ ಸಮಸ್ಯೆಯಿಂದಾಗಿ ಹೊಸ ಕಟ್ಟಡಗಳಿಗೆ ಪರವಾನಗಿ ಸಿಗುತ್ತಿಲ್ಲ. ವಿದ್ಯುತ್‌ ಸಂಪರ್ಕಕ್ಕೆ ನಿರಾಪೇಕ್ಷಣ ಪತ್ರ ದೊರಕುತ್ತಿಲ್ಲ. 35 ವಾರ್ಡ್‌ಗಳಲ್ಲಿಯೂ ದಾರಿದೀಪಗಳ ಸಮಸ್ಯೆ ಇದೆ. ರಸ್ತೆಯ ಬದಿಯಲ್ಲಿ ಬೆಳೆದಿರುವ ಗಿಡಗಂಟಿಗಳ
ಸ್ವಚ್ಛತೆಯಾಗಿಲ್ಲ. ಇದರಿಂದ ಸಾರ್ವಜನಿಕರಿಗೆ ಸಂಚರಿಸಲು ತೊಂದರೆ ಆಗುತ್ತಿದೆ ಎಂದು ಸದಸ್ಯರು ದೂರಿದರು.
ಒಳಚರಂಡಿ ವ್ಯವಸ್ಥೆ ಬಗ್ಗೆಯೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸದಸ್ಯರು ಮನವಿಯಲ್ಲಿ ಆಗ್ರಹಿಸಿದ್ದಾರೆ.
ನಗರಸಭಾ ಸದಸ್ಯರಾದ ರಮೇಶ್‌ ಕಾಂಚನ್‌, ಅಮೃತಾ ಕೃಷ್ಣಮೂರ್ತಿ, ವಿಜಯ‌ ಪೂಜಾರಿ, ಸೆಲಿನಾ ಕರ್ಕಡ, ಮಾಜಿ ನಗರಸಭಾ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಮಾಜಿ ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್‌ ಮೊದಲಾದವರು ಇದ್ದರು.