ಅನಾಥ ರೋಗಿಗಳ ಆರೈಕೆಗೆ ಅನಾಥಾಶ್ರಮ-ಉಡುಪಿ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್

ಉಡುಪಿ: ಜಿಲ್ಲೆಯ ಜಿಲ್ಲಾಸ್ಪತ್ರೆಗಳಲ್ಲಿ ದಾಖಲಾಗುವ ಅನಾಥ ರೋಗಿಗಳ ಆರೈಕೆಗಾಗಿ ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಹಯೋಗದಲ್ಲಿ ಅನಾಥಾಲಯ ಆರಂಭಿಸುವ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್ ಸೂಚಿಸಿದ್ದಾರೆ.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾ ಆಸ್ಪತ್ರೆಗೆ ಸಮಾಜಸೇವಕರು ಮತ್ತು ಸಾರ್ವಜನಿಕರು ಅನಾಥ ರೋಗಿಗಳನ್ನು ದಾಖಲಿಸುತ್ತಿದ್ದು, ಇವರಿಗೆ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಥಳಾವಕಾಶದ ಕೊರತೆ ಇರುವ ಬಗ್ಗೆ ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್ ತಿಳಿಸಿದರು, ಈ ಕುರಿತಂತೆ ಅನಾಥ ರೋಗಿಗಳ ಆರೈಕೆಗಾಗಿ ಜಿಲ್ಲೆಯಲ್ಲಿ ಅನಾಥಾಲಯ ಆರಂಭಿಸುವಂತೆ ಮತ್ತು ಜಿಲ್ಲಾಸ್ಪತ್ರೆಯಿಂದ ಸೂಚಿಸುವ ಅನಾಥರೋಗಿಗಳನ್ನು ಕಡ್ಡಾಯವಾಗಿ ದಾಖಲು ಮಾಡಿಕೊಳ್ಳುವಂತೆ ತಿಳಿಸಿದ ಮಹೇಶ್ವರ ರಾವ್, ಈ ಅನಾಥಾಲಯಕ್ಕೆ ಜಿಲ್ಲಾ ಖನಿಜ ನಿಧಿಯಿಂದ ಕೂಡ ಅಗತ್ಯ ಆರ್ಥಿಕ ನೆರವು ನೀಡುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಉಡುಪಿ ಜಿಲ್ಲಾಸ್ಪತ್ರೆ ಇದುವರೆಗೂ ತಾಲೂಕು ಆಸ್ಪತ್ರೆ ಮಾದರಿಯಲ್ಲಿಯೇ ಇದ್ದು, ಇದನ್ನು ಜಿಲ್ಲಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ ಕೋರಿದರು. ಈ ಕುರಿತಂತೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸುವುದಾಗಿ ತಿಳಿಸಿದ ಮಹೇಶ್ವರ ರಾವ್, ಪ್ರಸ್ತುತ ಆಸ್ಪತ್ರೆಯಲ್ಲಿ  ದಾಖಲಾಗುತ್ತಿರುವ ಒಳರೋಗಿಗಳ ಸಂಖ್ಯೆ, ಚಿಕಿತ್ಸೆಗೆ ಆಗಮಿಸುತ್ತಿರುವ ಹೊರರೋಗಿಗಳ ಸಂಖ್ಯೆ ಕುರಿತಂತೆ ವಿವರಗಳನ್ನು ನೀಡುವಂತೆ ಜಿಲ್ಲಾ ಸರ್ಜನ್‍ಗೆ ಸೂಚಿಸಿದ ಅವರು, ಈ ಬಗ್ಗೆ  ಸಂಬಂದಪಟ್ಟವರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಮುಂತಾದ ರೋಗಗಳ ಹರಡುವಿಕೆ ಕುರಿತಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ ಅವರು, ಶಾಲಾ ಕಾಲೇಜುಗಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಮತ್ತು ಜಿಲ್ಲೆಯ ಎಲ್ಲಾ ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೆಂದ್ರಗಳಲ್ಲಿ ಚಿಕಿತ್ಸೆಗಾಗಿ ಖರೀದಿಸಿರುವ ಉಪಕರಣಗಳು ಸಮರ್ಪಕವಾಗಿ ಬಳಕೆಯಾಗುತ್ತಿರುವ ಬಗ್ಗೆ ವರದಿ ನೀಡುವಂತೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಎಎಸ್ಪಿ ಕುಮಾರ ಚಂದ್ರ ಹಾಗೂ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.