ಉಡುಪಿ: ಹೆದ್ದಾರಿಯ ಹೊಂಡ ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಟ್ರಾಫಿಕ್ ಪೊಲೀಸರು; ಸಾರ್ವಜನಿಕರಿಂದ ಭಾರೀ ಮೆಚ್ಚುಗೆ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಅಂಬಲಪಾಡಿ ಜಂಕ್ಷನ್‌ನಲ್ಲಿ ಅಂಡರ್ ಪಾಸ್ ಕಾಮಗಾರಿ ಪ್ರಗತಿಯಲ್ಲಿದ್ದು, ಇದರಿಂದ ವಾಹನಗಳು ಸರ್ವಿಸ್ ರಸ್ತೆ ಸಂಚರಿಸುತ್ತಿವೆ. ಆದರೆ ನಿರಂತರ ಸುರಿದ ಧಾರಾಕಾರ ಮಳೆಗೆ ಸರ್ವಿಸ್ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿದ್ದು, ಇದರಿಂದ ವಾಹನ ಸಂಚಾರಕ್ಕೆ ಸಾಕಷ್ಟು ಅಡಚಣೆಯಾಗುತ್ತಿದೆ.

ಪ್ರತಿದಿನ ಈ ರಸ್ತೆಯ ಮೂಲಕ‌ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ವಾಹನ ದಟ್ಟನೆ ಹೆಚ್ಚಾಗಿರುವುದರಿಂದ ನಿತ್ಯ‌ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರು ಬಹಳಷ್ಟು ಸಮಸ್ಯೆ ಎದುರಿಸುವಂತಾಗಿದೆ. ಹೊಂಡ ಮುಚ್ಚುವಂತೆ ಸಂಬಂಧಪಟ್ಟ ಇಲಾಖೆಗೆ ಪೊಲೀಸರು ಸೂಚನೆ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಟ್ರಾಫಿಕ್ ಪೊಲೀಸರೇ ಕಾರ್ಯಾಚರಣೆಗೆ ಇಳಿದು ಹೊಂಡಗುಂಡಿಗಳನ್ನು ಮುಚ್ಚುಕಾರ್ಯ ಮಾಡಿದರು. ಹೊಂಡಗಳಿಗೆ ಕಲ್ಲುಗಳನ್ನು ಹಾಕಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಪೊಲೀಸರ ಕಾರ್ಯಕ್ಕೆ ಸಾರ್ವಜನಿಕ ವಲಯದಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.