ಉಡುಪಿ: ಅಂಬಾಗಿಲು ಬಳಿ ರಾಷ್ಟ್ರೀಯ ಹೆದ್ದಾರಿ 66ರ ಬಳಿಯ ಸೂಚನ ಫಲಕದ ಕಂಬಕ್ಕೆ ಮಹೇಂದ್ರ ಪಿಕ್ ಅಪ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸಹಿತ ಇಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.
ಕುಂದಾಪುರ ಮೂರುಕೈ ನಿವಾಸಿ, ಚಾಲಕ ದಿನೇಶ್ (37) ಹಾಗೂ ಇವರ ನೆರೆಮನೆಯ ಮಂಜುನಾಥ್(26) ಮೃತ ದುರ್ದೈವಿಗಳು. ಇವರು ಆದಿಉಡುಪಿ ಎಪಿಎಂಸಿ ಮಾರುಕಟ್ಟೆಗೆ ತರಕಾರಿ ಖರೀದಿಸಲು ಬರುತ್ತಿದ್ದರು ಎನ್ನಲಾಗಿದೆ. ಈ ವೇಳೆ ನಿದ್ದೆ ಮಂಪರಿನಿಂದ ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆ ಬದಿ ಹಾಕಲಾದ ಸೂಚನ ಫಲಕದ ಕಂಬಕ್ಕೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಅಪಘಾತವಾದ ರಭಸಕ್ಕೆ ವಾಹನ ಎದುರಿನ ಭಾಗ ಸಂಪೂರ್ಣ ಜಖಂಗೊಂಡಿದ್ದು, ಇದರ ಪರಿಣಾಮ ಚಾಲಕ ದಿನೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮಂಜುನಾಥ್ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.