ಉಡುಪಿ: ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ವಿಳಂಬವಿಲ್ಲದೇ ತ್ವರಿತವಾಗಿ ಪೂರ್ಣಗೊಳಿಸುವುದರೊಂದಿಗೆ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವಂತೆ ಉಡುಪಿ – ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಹಾಗೂ ಅಭಿಯಂತರರುಗಳಿಗೆ ಸೂಚನೆ ನೀಡಿದರು.
ಅವರು ಆ.16 ರಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ 169 ಎ ಗೆ ಸಂಬಂಧಿಸಿದಂತೆ ಹಾಗೂ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಪ್ರಗತಿ ಪರಿಶೀಲನೆ ಕುರಿತು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳ್ಳದೇ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆ ಉಂಟಾಗುತ್ತಿದೆ. ಮಳೆಯಿಂದಾಗಿ ರಸ್ತೆಗಳು ಹೊಂಡ-ಗುಂಡಿಗಳಿಂದ ಕೂಡಿದ್ದು, ಇವುಗಳ ದುರಸ್ಥಿಗೆ ಹಾಗೂ
ನಿರ್ವಹಣೆಗೆ ಮುಂದಾಗಬೇಕು ಎಂದರು. ರಾಷ್ಟ್ರೀಯ ಹೆದ್ದಾರಿ 169 ಎ ಕರಾವಳಿ ಜಂಕ್ಷನ್ನಿಂದ ಮಲ್ಪೆವರೆಗಿನ ರಸ್ತೆ ಕಾಮಗಾರಿಗೆ ಅಗತ್ಯವಿರುವ ಭೂ ಸ್ವಾಧೀನ ಪ್ರಕ್ರಿಯೆಗೆ ಸಂಬ೦ಧಿಸಿದ ಪರಿಹಾರದ ಹಣವನ್ನು ಕಾಲಮಿತಿಯಲ್ಲಿ ನೀಡಬೇಕು ಎಂದ ಅವರು, ಸೆಪ್ಟಂಬರ್ ಮೊದಲ ವಾರದಿಂದ ರಸ್ತೆಯ ಕಾಂಕ್ರೀಟೀಕರಣ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದರು.

ಕರಾವಳಿ ಜಂಕ್ಷನ್ನಲ್ಲಿ ಫ್ರೀ ಏರಿಯಾ ಅಳವಡಿಸುವುದರ ಮೂಲಕ ಲಘು ವಾಹನಗಳಿಗೆ ಸಂಚರಿಸಲು ಅನುಕೂಲವಾಗುವಂತೆ ಕಾಮಗಾರಿ ಮುಗಿಸಬೇಕು. ಶಾಶ್ವತ ಕಾಮಗಾರಿಗಳನ್ನು ಆರಂಭಿಸುವ ಮುನ್ನ ತಾತ್ಕಾಲಿಕ ರಸ್ತೆಗಳಲ್ಲಿರುವ ಹೊಂಡ-ಗುಂಡಿಗಳನ್ನು ತುರ್ತಾಗಿ ಮುಚ್ಚಿಸುವ ಕೆಲಸವಾಗಬೇಕು. ಈಗಾಗಲೇ ದಾಖಲೆಗಳನ್ನು ನೀಡದಿರುವ 18 ಜನರಿಗೆ ನ್ಯಾಯಾಲಯದ ಮೂಲಕ ಪರಿಹಾರ ಠೇವಣಿ ಇರಿಸಲು ಕ್ರಮವಹಿಸುವಂತೆ ಸಂಬ೦ಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ ಅವರು, ಸಣ್ಣ ಪುಟ್ಟ ಕಾರಣಗಳಿಂದ ಬಾಕಿ ಉಳಿದಿರುವ 90 ಭೂಸ್ವಾಧೀನ ಪ್ರಕರಣಗಳಿಗೆ 2 ದಿನಗಳ ಒಳಗಾಗಿ 3ಡಿ ಸಮರ್ಪಕಗೊಳಿಸಿ, ಬೆಂಗಳೂರು ಆರ್.ಓ ಕಚೇರಿಗೆ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಹೆಬ್ರಿ-ಚಾರದವರೆಗೆ ಮತ್ತು ಆಗುಂಬೆ ಘಾಟ್ನ ಹೆದ್ದಾರಿಯ ಯೋಜನಾ ವರದಿ (ಡಿ.ಪಿ.ಆರ್) ಸಿದ್ಧವಾಗಿದೆ. ಈ ಎರಡೂ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಗಳನ್ನು ತ್ವರಿತವಾಗಿ ಫೂರ್ಣಗೊಳಿಸಿ, ಕಾಮಗಾರಿಗಳನ್ನು ಪ್ರಾರಂಭಿಸಬೇಕು ಎಂದು ಸೂಚನೆ ನೀಡದರು.
ಇಂದ್ರಾಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯ ಕಾಂಕ್ರೀಟಿಕರಣ ಮುಕ್ತಾಯಗೊಂಡಿದ್ದು, ಎರಡೂ ಬದಿಯ ಇವಿಟ್ಮೆಂಟ್ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ಸೆಪ್ಟಂಬರ್ 15 ಕ್ಕೆ ಅವಕಾಶ ಮಾಡಿಕೊಡಬೇಕು ಎಂದರು.
ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಪರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ವಾಹನಗಳ ಬದಲಿ ಮಾರ್ಗ ವ್ಯವಸ್ಥೆಗೆ ಈಗಾಗಲೇ ಆದೇಶ ಮಾಡಲಾಗಿದೆ. ಅಲ್ಲಿನ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಬೇಕು. ಜಿಲ್ಲೆಯ ಇತರೆ ಭಾಗಗಳಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ವೇಗವನ್ನು ಹೆಚ್ಚಿಸಬೇಕು. ರಸ್ತೆ ಕಾಮಗಾರಿಗಳನ್ನು ಕೈಗೊಳ್ಳುವಾಗ ಸಾರ್ವಜನಿಕ ವಾಹನಗಳ ಚಾಲನೆಗೆ ಅಗತ್ಯವಿರುವ ಬದಲಿ ತಾತ್ಕಾಲಿಕ ರಸ್ತೆಗಳನ್ನು ಸಹ ಮಾಡಿಕೊಡಬೇಕು ಎಂದು ಅಭಿಯಂತರರಿಗೆ ಸೂಚಿಸಿದರು.
ಶಾಸಕ ಯಶ್ಪಾಲ್ ಎ ಸುವರ್ಣ ಮಾತನಾಡಿ, ಪರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಘು ವಾಹನಗಳಿಗೆ ಸಂಚರಿಸಲು ಒಂದು ಬದಿಯಲ್ಲಿ ಅವಕಾಶ ಕಲ್ಪಿಸಿ, ಭಾರೀ ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗದ ವ್ಯವಸ್ಥೆ ಮಾಡುವುದರೊಂದಿಗೆ ಕಾಮಗಾರಿ ಆರಂಭಿಸುವ೦ತೆ ಸಲಹೆ ನೀಡಿದರು.
ಸಭೆಯಲ್ಲಿ ಗುರ್ಮೆ ಸುರೇಶ್ ಶೆಟ್ಟಿ, ಡಿ.ಎಫ್.ಓ ಗಣಪತಿ, ಎಎಸ್ಪಿ ಸುಧಾಕರ್ ನಾಯಕ್, ಪೌರಾಯುಕ್ತ ಮಹಾಂತೇಶ ಹಂಗರಗಿ, ಭೂದಾಖಲೆಗಳ ಉಪನಿರ್ದೇಶಕ ರವೀಂದ್ರ, ಎನ್.ಹೆಚ್ ಅಭಿಯಂತರರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.












