ಉಡುಪಿ: ಕೊರೊನಾ ಎರಡನೇ ಅಲೆಯ ಆತಂಕದ ನಡುವೆ ಯೇಸು ಸ್ವಾಮಿ ಜೆರುಸಲೇಂ ನಗರವನ್ನು ಪ್ರವೇಶಿಸಿದ ಸಂಕೇತವಾಗಿ ಆಚರಿಸುವ ಗರಿಗಳ ಭಾನುವಾರ (ಪಾಮ್ ಸಂಡೆ)ಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಸರಳವಾಗಿ ಆಚರಿಸಿದರು.
ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ನಿತ್ಯ ಸಹಾಯ ಮಾತೆಯ ಇಗರ್ಜಿ ಕಳತ್ತೂರು ಇಲ್ಲಿ ನಡೆದ ಧಾರ್ಮಿಕ ವಿಧಿವಿಧಾನದಲ್ಲಿ ಭಾಗವಹಿಸಿದರು. ಈ ವೇಳೆ ಚರ್ಚ್ನ ಪ್ರಧಾನ ಧರ್ಮಗುರು ಲೊರೇನ್ಸ್ ಬಿ. ಡಿಸೋಜಾ ಮತ್ತು ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಚೇತನ್ ಲೋಬೊ ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಎಲ್ಲ ಚರ್ಚ್ಗಳಲ್ಲಿ ಕ್ರೈಸ್ತ ಬಾಂಧವರು ಬೆಳಗ್ಗಿನ ಪ್ರಾರ್ಥನಾ ವಿಧಿಯಲ್ಲಿಪಾಲ್ಗೊಂಡು ತೆಂಗಿನ ಗರಿಗಳನ್ನು ಹಿಡಿದುಕೊಂಡು ಯೇಸುವಿನ ಕಷ್ಟದ ದಿನಗಳನ್ನು ನೆನಪು ಮಾಡಿಕೊಂಡು ಬಲಿಪೂಜೆಯಲ್ಲಿ ಭಾಗವಹಿಸಿದರು. ಕೊರೊನಾ ಹಿನ್ನೆಲೆಯಲ್ಲಿ ಸರಕಾರದ ಮಾರ್ಗಸೂಚಿಯಂತೆ ಸಾರ್ವಜನಿಕ ಮೆರವಣಿಗೆಗಳನ್ನು ರದ್ದುಪಡಿಸಲಾಗಿತ್ತು.
ಚರ್ಚಿಗೆ ಆಗಮಿಸುವ ಪ್ರತಿಯೊಬ್ಬರಿಗೂ ಮಾಸ್ಕ್ ಧಾರಣೆ, ಸ್ಯಾನಿಟೈಸರ್ ಕಡ್ಡಾಯಗೊಳಿಸಲಾಗಿತ್ತು. ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಬಲಿಪೂಜೆಯಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿತ್ತು.
ಧರ್ಮಪ್ರಾಂತ್ಯದ ಪ್ರಧಾನ ದೇವಾಲಯವಾದ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ನಲ್ಲಿ ದೇವಾಲಯದ ಪ್ರಧಾನ ಧರ್ಮಗುರು ವಲೇರಿಯನ್ ಮೆಂಡೊನ್ಸಾ ಅವರು ಧಾರ್ಮಿಕ ವಿಧಿವಿಧಾನದ ನೇತೃತ್ವ ವಹಿಸಿದ್ದರು.
ಪಾಮ್ ಸಂಡೆ ಆಚರಣೆಯೊಂದಿಗೆ ಕ್ರೈಸ್ತರ ಪವಿತ್ರ ಸಪ್ತಾಹ ಆರಂಭಗೊಳ್ಳುತ್ತದೆ. ಯೇಸುಕ್ರಿಸ್ತರು ಜೆರುಸಲೇಂ ನಗರವನ್ನು ಪ್ರವೇಶಿಸಿದಾಗ ಅಲ್ಲಿನ ಭಕ್ತರು ಒಲಿವ್ ಮರದ ಗರಿಗಳನ್ನು ಹಿಡಿದು ಯೇಸುವಿಗೆ ವೈಭವದಿಂದ ಸ್ವಾಗತಿಸಿದ ಸಂಕೇತವಾಗಿ ತೆಂಗಿನ ಗರಿಗಳನ್ನು ಹಿಡಿದು ಕ್ರೈಸ್ತರು ಮೆರವಣಿಗೆಯಲ್ಲಿ ತೆರಳಿ ಪವಿತ್ರ ಬಲಿಪೂಜೆಯಲ್ಲಿ ಪಾಲ್ಗೊಳ್ಳುತ್ತಾರೆ.
ಪವಿತ್ರ ಸಪ್ತಾಹವು ಕ್ರೈಸ್ತರಿಗೆ ಅತೀ ಮಹತ್ವದಾಗಿದ್ದು, ಗುರುವಾರ ಯೇಸುಕ್ರಿಸ್ತರು ಕೊನೆಯ ಭೋಜನ ಸ್ಮರಣೆ ಮಾಡಿದ್ದರೆ, ಶುಕ್ರವಾರ ಯೇಸುಕ್ರಿಸ್ತರ ಮರಣದ ದಿನವಾದ ಗುಡ್ ಫ್ರೈಡೆ ಆಚರಿಸಿ ಇಡೀ ದಿನವನ್ನು ಉಪವಾಸ, ಧ್ಯಾನದಲ್ಲಿ ಕಳೆಯುತ್ತಾರೆ. ಶನಿವಾರ ಈಸ್ಟರ್ ಜಾಗರಣೆ ಮತ್ತು ಭಾನುವಾರ ಯೇಸುಕ್ರಿಸ್ತರ ಪುನರುತ್ಥಾನದ ಪ್ರಯುಕ್ತ ಈಸ್ಟರ್ ಹಬ್ಬ ಆಚರಿಸಲಾಗುತ್ತದೆ.