ಉಡುಪಿ: ನ.28ರಂದು ಉಡುಪಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಬೆಳಿಗ್ಗೆ 11.40 ಸುಮಾರಿಗೆ ಉಡುಪಿ ಬನ್ನಂಜೆಯ ನಾರಾಯಣಗುರು ಸರ್ಕಲ್ ನಿಂದ ಕಲ್ಸಂಕದವರೆಗೆ ರೋಡ್ ಶೋ ಕಾರ್ಯಕ್ರಮ ನಡೆಯಲಿದೆ. ಬಳಿಕ ಅವರು ಕೃಷ್ಣಮಠಕ್ಕೆ ತೆರಳಿ ಶ್ರೀಕೃಷ್ಣ ದರ್ಶನ ಪಡೆಯಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.
ಕಡಿಯಾಳಿಯ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಉಡುಪಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರನ್ನು ಭವ್ಯವಾಗಿ ಸ್ವಾಗತಿಸಲು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಭರ್ಜರಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
ಪ್ರಧಾನಿ ಮೋದಿ ಅವರ ‘ರೋಡ್ ಶೋ ಮಾರ್ಗದ ಮೂರು ಕಡೆಗಳಲ್ಲಿ ಕರಾವಳಿಯ ಕಲೆ, ಸಂಸ್ಕೃತಿಯನ್ನು ಬಿಂಬಿಸುವ ಯಕ್ಷಗಾನ ವೇಷ, ಹುಲಿ ವೇಷ, ಶ್ರೀ ಕೃಷ್ಣ ವೇಷಧಾರಿಗಳ ಪ್ರದರ್ಶನ ಇರಲಿವೆ. ರಸ್ತೆ ಮಾರ್ಗದ ಒಂದು ಕಡೆ ಬ್ಯಾರಿಕೇಡ್ ಅಳವಡಿಸಲಾಗುತ್ತಿದ್ದು, ಆ ರಸ್ತೆಯ ಇಕ್ಕೆಲಗಳಲ್ಲಿ 30 ಸಾವಿರಕ್ಕೂ ಅಧಿಕ ಜನರು ನಿಂತು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲಿದ್ದಾರೆ. ರೋಡ್ ಶೋ ವೀಕ್ಷಣೆ ಮಾಡುವ ಸಮಸ್ತ ನಾಗರಿಕರು ನ.28ರ ಬೆಳಿಗ್ಗೆ 10.30ರೊಳಗೆ ಬನ್ನಂಜೆ-ಕಲ್ಸಂಕ ರಸ್ತೆಯ ಇಕ್ಕೆಲಗಳಲ್ಲಿ ಉಪಸ್ಥಿತರಿರುವಂತೆ ಕೋರಲಾಗಿದೆ ಎಂದರು.
ಕೃಷ್ಣನ ದರ್ಶನ ಪಡೆದ ಬಳಿಕ ಪ್ರಧಾನಿ ಮೋದಿ ಅವರು ಸಾಮೂಹಿಕ ‘ಲಕ್ಷ ಕಂಠ ಗೀತಾ ಪಾರಾಯಣ’ದಲ್ಲಿ ಪಾಲ್ಗೊಂಡು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕೇಂದ್ರ ಸಚಿವ ಪ್ರುಲ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಬ್ರಿಜೇಶ್ ಚೌಟ ಸಹಿತ ಜಿಲ್ಲೆಯ ಶಾಸಕರು, ರಾಜ್ಯದ ಪ್ರಮುಖ ನಾಯಕರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಶಿಲ್ಪಾ ಸುವರ್ಣ, ರೇಷ್ಮಾ ಉದಯ್ ಶೆಟ್ಟಿ, ಶ್ರೀಕಾಂತ್ ನಾಯಕ್, ದಿನಕರ ಶೆಟ್ಟಿ, ಶ್ರೀನಿಧಿ ಹೆಗ್ಡೆ, ಶಿವಕುಮಾರ್ ಅಂಬಲಪಾಡಿ, ರತ್ನಾಕರ ಇಂದ್ರಾಳಿ ಉಪಸ್ಥಿತರಿದ್ದರು.


















