ಉಡುಪಿ: ಪ್ರತೀ ವರ್ಷದಂತೆ ಈ ಬಾರಿಯೂ ಜನವರಿ 26 ರಂದು ನಡೆಯಲಿರುವ ಭಾರತದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಯೋಜಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.
ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ
ಆಚರಣೆಯ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ಜನವರಿ 26 ರಂದು ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ
ಕ್ರೀಡಾಂಗಣದಲ್ಲಿ ಬೆಳಗ್ಗೆ 8.30 ಕ್ಕೆ ಆರಂಭವಾಗಲಿದ್ದು, 8.30 ರಿಂದ 8.50 ರ ವರೆಗೆ ದೇಶ ಭಕ್ತಿಗೀತೆ ಕಾರ್ಯಕ್ರಮ, ನಂತರ ಹುತಾತ್ಮ
ಯೋಧರಿಗೆ ಗೌರವ ಸಮರ್ಪಣೆ ನಡೆಯಲಿದೆ. ಬೆ. 9 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕಾರ ಮಾಡಿ ಗಣರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ. ನಂತರ ಶಾಲಾ – ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.
ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪೊಲೀಸ್, ಅರಣ್ಯ, ಗೃಹ ರಕ್ಷಕ, ಎನ್.ಸಿ.ಸಿ. ಸ್ಕೌಟ್ ಮತ್ತು ಗೈಡ್ಸ್, ಸೇವಾದಳ ಸೇರಿದಂತೆ ವಿವಿಧ
ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಲಿದ್ದು, ಈ ಬಗ್ಗೆ ಮೂರು ದಿನಗಳ ಮುಂಚಿತವಾಗಿ ಪೂರ್ವ ತಯಾರಿ ಮಾಡಿಕೊಳ್ಳಬೇಕು.
ವೇದಿಕೆಯ ಸಿದ್ಧತೆ, ಸ್ವಾತಂತ್ರ‍್ಯ ಹೋರಾಟಗಾರರು, ಗಣ್ಯರು, ಅಧಿಕಾರಿಗಳು, ಮಾಧ್ಯಮದವರು ಆಸೀನರಾಗಲು ಪ್ರತ್ಯೇಕ ಆಸನ ವ್ಯವಸ್ಥೆ, ಧ್ವನಿವರ್ಧಕ, ಕುಡಿಯುವ ನೀರಿನ ವ್ಯವಸ್ಥೆ, ಸಿಹಿ ವಿತರಣೆ, ಆಂಬುಲೆನ್ಸ್ ನಿಯೋಜನೆ ಸೇರಿದಂತೆ ಮತ್ತಿತರ ಮೂಲಸೌಕರ್ಯವನ್ನು ಒದಗಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದರು.
ಗಣರಾಜ್ಯೋತ್ಸವ ಆಚರಣೆಗೆ ಸಂಬಂಧಪಟ್ಟಂತೆ ಸ್ವಾಗತ, ನಿರೂಪಣೆ, ಶಿಷ್ಟಾಚಾರ ಹಾಗೂ ವೇದಿಕೆ ಸಮಿತಿ, ಪೆರೇಡ್ ಸಮಿತಿ, ಸಾಂಸ್ಕೃತಿಕ
ಕಾರ್ಯಕ್ರಮಗಳ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಆಯಾ ಸಮಿತಿಯಲ್ಲಿರುವ ಅಧಿಕಾರಿಗಳು ತಮಗೆ ವಹಿಸಿದ ಕಾರ್ಯಗಳನ್ನು ಉತ್ತಮವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.
ಭಾರತದ ಸಂವಿಧಾನ ಆಚರಣೆಯ ಪ್ರತೀಕವಾಗಿರುವ ಭಾರತದ ಗಣರಾಜ್ಯೋತ್ಸವ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು
ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಇಲಾಖೆಗಳು ಸಮನ್ವಯತೆಯಿಂದ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿ ಗಣರಾಜ್ಯೋತ್ಸವವನ್ನು ಆಚರಿಸಬೇಕು. ಇಲಾಖೆಯ ಅಧಿಕಾರಿಗಳಿಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟುನಿಟ್ಟಾಗಿ ಪಾಲಿಸಿ, ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರ ವಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಎಲ್ಲ ಅಧಿಕಾರಿಗಳು, ನಗರದ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ
ಅಧಿಕಾರಿ ಹಾಗೂ ಸಿಬ್ಬಂದಿಗಳು ತಪ್ಪದೇ ಭಾಗವಹಿಸಬೇಕು ಎಂದ ಅವರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ನಗರಸಭೆ ಪೌರಾಯುಕ್ತ
ಮಹಾಂತೇಶ ಹಂಗರಗಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
















