ಉಡುಪಿ: ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿನಿಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ಪ್ರಕರಣಗಳು ಕಂಡುಬಂದಿರುವ ಹಿನ್ನೆಲೆ, ರಾಜ್ಯದ ಶಬರಿಮಲೆ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಲು ಮತ್ತು ಸೋಂಕುತಡೆಯಲು ಅಗತ್ಯ ಮುನ್ನೆಚ್ಚರಿಕೆ/ ಸುರಕ್ಷಿತಾ ಕ್ರಮಗಳನ್ನು ಪಾಲಿಸುವ ಕುರಿತು ಈ ಕೆಳಕಂಡಂತೆ ಸಲಹೆಗಳನ್ನು ನೀಡಲಾಗಿದೆ.
ನೇಗ್ಲೇರಿಯಾ ಫೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ. ನೇಗ್ಲೇರಿಯಾ ಫೌಲೇರಿ ಅತ್ಯಂತ ವಿಷಕಾರಿ ಸೂಕ್ಷ್ಮ ಜೀವಿಯಾಗಿದ್ದು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಿ,ಅಮೀಬಿಕ್ ಮೆನಿಂಗೊಎನ್ನೆಫಲೈಟಿಸ್ ಎನ್ನುವ ಅಪರೂಪದ ಗಂಭೀರ/ಮಾರಣಾಂತಿಕ ಖಾಯಿಲೆಯನ್ನು ಉಂಟುಮಾಡುತ್ತದೆ.
ಯಾತ್ರೆಯ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಸ್ನಾನ ಮಾಡುವಾಗ ನೀರು ಪ್ರವೇಶಿಸದಂತೆ ಮೂಗಿನ ಕ್ಲಿಪ್ಗಳನ್ನು ಬಳಸಿ ಅಥವಾ ಮೂಗನ್ನು ಬಿಗಿಯಾಗಿ ಮುಚ್ಚಿ ಹಿಡಿದು ಮುನ್ನೆಚ್ಚರಿಕೆ ವಹಿಸಬೇಕು.ನೀರಿನ ಸಂಪರ್ಕದ ಏಳು ದಿನಗಳ ಒಳಗೆ ಜ್ವರ, ತೀವು ತಲೆನೋವು, ವಾಕರಿಕೆ/ವಾಂತಿ, ಕುತ್ತಿಗೆ ಬಿಗಿತ, ಗೊಂದಲ/ ಮಾನಸಿಕ ಸ್ಥಿತಿಗಳಲ್ಲಿ ಬದಲಾವಣೆಗಳು ಹಾಗೂ ವ್ಯಕ್ತಿಯ ವರ್ತನೆಯಲ್ಲಿ ಅಸ್ವಸ್ಥತೆ ಲಕ್ಷಣಗಳು ಕಾಣಿಸಿಕೊಂಡಲ್ಲಿ ನಿರ್ಲಕ್ಷಿಸದೇ ತುರ್ತು ಆರೈಕೆಯನ್ನು ಪಡೆಯಲು ಹತ್ತಿರದ ಸರ್ಕಾರಿ ಆಸ್ಪತ್ರೆಯ ವೈದ್ಯರನ್ನು ಸಂಪರ್ಕಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.


















