ಉಡುಪಿ: ಗ್ರಾಮೀಣ ಭಾಗದ ಎಸ್ ಸಿ, ಎಸ್ ಟಿ ಹಾಗೂ ಒಬಿಸಿ ಜನಾಂಗದವರಿಗೆ ಡಾ. ಅಂಬೇಡ್ಕರ್ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕಾಗಿ ಕನಿಷ್ಠ 9 ಲಕ್ಷ ರೂ. ಸಹಾಯಧನ ಹಾಗೂ ಬಸವ ಇಂದಿರಾ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ 5ಲಕ್ಷ ರೂ. ಸಹಾಯಧನ ನೀಡಲು ಬಜೆಟ್ ನಲ್ಲಿ ಅಧಿಕೃತವಾಗಿ ಘೋಷಿಸಿ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ಸಮತಾ ಸೈನಿಕ ದಳದ ಉಡುಪಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಗುರುವಾರ ಧರಣಿ ನಡೆಸಲಾಯಿತು.
ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಬಳಿ ನೂರಾರು ಸಂಖ್ಯೆಯಲ್ಲಿ ಸಮತಾ ಸೈನಿಕ ದಳದ ಕಾರ್ಯಕರ್ತರು ಜಮಾಯಿಸಿದ್ದರು. ಅಲ್ಲಿಂದ ಬ್ರಹ್ಮಗಿರಿಯ ಕಾಂಗ್ರೆಸ್ ಭವನಕ್ಕೆ ಪಾದಯಾತ್ರೆಯ ಮೂಲಕ ತೆರಳಲು ಮುಂದಾದರು. ಅಜ್ಜರಕಾಡಿನಿಂದ ಪಾದಯಾತ್ರೆಯ ಮೂಲಕ ಆಗಮಿಸಿದ ಕಾರ್ಯಕರ್ತರನ್ನು ಬ್ರಹ್ಮಗಿರಿಯಲ್ಲಿ ಪೊಲೀಸರು ತಡೆದರು. ಈ ವೇಳೆ ಪೊಲೀಸರು ಹಾಗೂ ಧರಣಿನಿರತರ ಮಧ್ಯೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.
ಉಸ್ತುವಾರಿ ಸಚಿವರು ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಬೇಕು. ಇಲ್ಲದಿದ್ದರೆ ಧರಣಿ ಕೈಬಿಡುವುದಿಲ್ಲ ಎಂದು ಧರಣಿನಿರತರು ಪಟ್ಟುಹಿಡಿದರು. ಬಳಿಕ ಧರಣಿನಿರತ ಸ್ಥಳಕ್ಕೆ ಆಗಮಿಸಿದ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ಮುಖಂಡರು ಮನವಿ ಸ್ವೀಕರಿಸಿ, ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು. ಬಳಿಕ ಧರಣಿಯನ್ನು ಹಿಂಪಡೆಯಲಾಯಿತು.
ಬಳಿಕ ಮಾತನಾಡಿದ ಸಮತಾ ಸೈನಿಕ ದಳದ ಜಿಲ್ಲಾಧ್ಯಕ್ಷ ವಿಶ್ವನಾಥ ಪೇತ್ರಿ ಅವರು, ನಮ್ಮ ಸಂಘಟನೆಯ ವತಿಯಿಂದ ಈಗಾಗಲೇ ಸಮಾಜ ಕಲ್ಯಾಣ ಇಲಾಖೆ ಸಚಿವರನ್ನು ಭೇಟಿಯಾಗಿ ಮನವಿ ನೀಡಿದ್ದೇವೆ. ಅವರು ಫೆ. 20ರಂದು ನಡೆಯುವ ಕುಂದುಕೊರತೆ ಸಭೆಯಲ್ಲಿ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡುತ್ತೇವೆ. ಬಜೆಟ್ ನಲ್ಲಿ ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ. ಆದರೆ ನಮ್ಮ ಬೇಡಿಕೆಗಳನ್ನು ಈಡೇರಿಸುತ್ತಾರೆ ಎಂಬ ನಂಬಿಕೆ ಇಲ್ಲ. ಹಾಗಾಗಿ ಈ ಧರಣಿ ಹಮ್ಮಿಕೊಂಡಿದ್ದೇವೆ. ಈಗ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಖುದ್ದಾಗಿ ಆಗಮಿಸಿ ಮನವಿ ಸ್ವೀಕರಿಸಿ, 10 ದಿನಗಳೊಳಗೆ ನಮ್ಮ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ. ಮುಖಂಡರಿಂದ ಭರವಸೆ ಸಿಕ್ಕ ಹಿನ್ನೆಲೆಯಲ್ಲಿ ನಮ್ಮ ಧರಣಿಯನ್ನು ಹಿಂಪಡೆದುಕೊಂಡಿದ್ದೇವೆ ಎಂದರು.
ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಸಮತಾ ಸೈನಿಕ ದಳದ ಬೇಡಿಕೆಗಳ ಮನವಿಯನ್ನು ಸರಕಾರದ ಗಮನ ಸೆಳೆಯಲು ಪ್ರಯತ್ನಿಸುತ್ತೇವೆ. ಒಂದು ವಾರದೊಳಗೆ ಈ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
















