ಉಡುಪಿ ತಾಲೂಕು ವ್ಯಾಪ್ತಿಯ ಜನಸಂಪರ್ಕ ಸಭೆ: ಕಾಪು ಶಾಸಕರಿಂದ ಅಹವಾಲು ಸ್ವೀಕಾರ

ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ ಉಡುಪಿ ತಾಲೂಕು ವ್ಯಾಪ್ತಿಗೆ ಬರುವ 10 ಗ್ರಾಪಂಗಳಿಗೆ ಸಂಬಂಧಿಸಿದ ಜನ ಸಂಪರ್ಕ ಸಭೆ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ಜನರ ಮನೆಬಾಗಿಲಿಗೆ ಸರಕಾರಿ ಸೇವೆಗಳನ್ನು ಕೊಂಡೊಯ್ದು, ಅವರ ಸಮಸ್ಯೆಗಳನ್ನು ಪರಿಹರಿಸುವುದೇ ನಮ್ಮ‌ ಧ್ಯೇಯವಾಗಿದೆ. ಅಧಿಕಾರದಲ್ಲಿದ್ದಾಗ ಜನರ ಋಣ ತೀರಿಸುವ ಕೆಲಸವಾಗಬೇಕು. ನಮ್ಮ ಆತ್ಮ ಒಪ್ಪುವ ರೀತಿಯಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದರು‌.

ಸಭೆಯಲ್ಲಿ 80 ಬಡಗುಬೆಟ್ಟು ಗ್ರಾಪಂ ಅಧ್ಯಕ್ಷ ಕೇಶವ ಕೋಟ್ಯಾನ್, ಕೊಡಿಬೆಟ್ಟು ಗ್ರಾಪಂ ಅಧ್ಯಕ್ಷ ಸಂದೀಪ್ ಮಡಿವಾಳ, ಬೈರಂಪಳ್ಳಿ ಗ್ರಾಪಂ ಅಧ್ಯಕ್ಷ ಪ್ರಸಾದ್ ಮಲ್ಯ, ಪೆರ್ಡೂರು ಗ್ರಾಪಂ ಅಧ್ಯಕ್ಷೆ ಚೇತನಾ ಶೆಟ್ಟಿ, ಉಡುಪಿ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ವಿಜಯಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾ.ಪಂ.ಸದಸ್ಯರು ಉಪಸ್ಥಿತರಿದ್ದರು. ಉಡುಪಿ ತಹಶೀಲ್ದಾರ್‌ ಗುರುರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು‌.