ತೆಂಕನಿಡಿಯೂರು ಕಾಲೇಜಿನಲ್ಲಿ ಇತಿಹಾಸ ಎಂ.ಎ. ಉದ್ಘಾಟನೆ

ಉಡುಪಿ, ಜುಲೈ 19: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ತೆಂಕನಿಡಿಯೂರು ಇಲ್ಲಿ ಇತಿಹಾಸ ಸ್ನಾತಕೋತ್ತರ ಅಧ್ಯಯನ ಜುಲೈ 17 ರಂದು ಉದ್ಘಾಟನೆಗೊಂಡಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ಜಿಲ್ಲಾ ಪಂಚಾಯತ್ ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಜನಾರ್ಧನ ತೋನ್ಸೆ ನೆರವೇರಿಸಿ ಶುಭ ಹಾರೈಸಿದರು.
ಶಿರ್ವ ಸೈಂಟ್ ಮೆರೀಸ್ ಕಾಲೇಜಿನ ಪ್ರಾಂಶುಪಾಲ ಪ್ರೊ. ರಾಜನ್ ಮಾತನಾಡಿ, ಸ್ನಾತಕೋತ್ತರ ವಿದ್ಯಾರ್ಥಿಗಳು ಸತತ ಅಧ್ಯಯನ ಶೀಲರಾದರೆ ಯಶಸ್ಸು ಸಾಧ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ವಹಿಸಿದ್ದರು.
ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ನಿಕಟಪೂರ್ವ ಪ್ರಾಂಶುಪಾಲ ಡಾ.ಜಗದೀಶ ಶೆಟ್ಟಿ ಹೊಸ ಎಂ.ಎ. ಕೋರ್ಸಿಗೆ ಉತ್ತಮ ಭವಿಷ್ಯವನ್ನು ಹಾರೈಸಿದರು.
ಕಾಲೇಜಿನ ಐಕ್ಯೂಎಸಿ ಸಂಚಾಲಕ ಡಾ. ಸುರೇಶ್ ರೈ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಗೋಪಾಲಕೃಷ್ಣ ಎಂ. ಗಾಂವ್ಕರ್ ಸ್ವಾಗತಿಸಿದರು. ಆಂಗ್ಲಭಾಷಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶರ್ಮಿಳಾ ಹಾರಾಡಿ ನಿರೂಪಿಸಿದರು.