ಉಡುಪಿ, ಆಗಸ್ಟ್ 1: ಮಕ್ಕಳಿಗೆ ಪರಿಪೂರ್ಣ ಹಾಗೂ ಪರಿಣಾಮಕಾರಿಯಾದ ಶಿಕ್ಷಣವನ್ನು ನೀಡುವ ಪ್ರಕ್ರಿಯೆಯಲ್ಲಿ ಉಂಟಾಗುವ ಅಡೆತಡೆಗಳನ್ನು ನಿವಾರಿಸಲು ಪ್ರತಿಯೊಬ್ಬರೂ ಕೂಡ ಪ್ರಯತ್ನಿಸಿ ಮಕ್ಕಳನ್ನು ಶೈಕ್ಷಣಿಕ ಪ್ರಕ್ರಿಯೆಯಲ್ಲಿ ಜೋಡಿಸಬೇಕಾದ ಅಗತ್ಯತೆ ಇದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶೇಷಶಯನ ಕಾರಿಂಜ ಅಭಿಪ್ರಾಯಪಟ್ಟರು.
ಅವರು ಇತ್ತೀಚೆಗೆ, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇದರ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರ ಮತ್ತು ಎಸ್.ಡಿ.ಎಮ್.ಸಿ ಸಮನ್ವಯ ವೇದಿಕೆ ಸಂಯುಕ್ತ ಆಶ್ರಯದಲ್ಲಿ ತೆಂಕನಿಡಿಯೂರು ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ‘ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಮರಳಿ ಶಾಲೆಗೆ’ ಜಾಗೃತಿ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು.
ಐಕ್ಯೂಎಸಿ ಸಂಚಾಲಕ ಡಾ. ಸುರೇಶ್ ರೈ ಕೆ. ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲೆಯಿಂದ ಹೊರಗುಳಿದ ಮಕ್ಕಳ ಮನಸ್ಸನ್ನು ಪ್ರೀತಿಯಿಂದ ಗೆಲ್ಲುವ ಮೂಲಕ ಅವರಲ್ಲಿ ಶಿಕ್ಷಣದ ಹಸಿವನ್ನು ಉಂಟಾಗುವಂತೆ ಸಂಬಂಧಪಟ್ಟ ಇಲಾಖೆ ಹಾಗೂ ಸರಕಾರೇತರ ಸಂಸ್ಥೆಗಳು ಕಾರ್ಯನಿರ್ವಹಿಸಬೇಕು ಎಂದರು.
ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ದಿವಾಕರ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಮಿಕ ಇಲಾಖೆಯ ಬಾಲಕೃಷ್ಣ ಎಮ್, ಸಮಾಜಕಾರ್ಯ ವಿಭಾಗದ ಸಂಯೋಜಕ ಡಾ.ದುಗ್ಗಪ್ಪ ಕಜೆಕಾರ್, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ರಾಘವ ನಾಯ್ಕ್, ಎಸ್.ಡಿ.ಎಮ್.ಸಿ ಸಮನ್ವಯ ಸಮಿತಿಯ ಅಬ್ದುಲ್ ಸಲಾಂ ಚಿತ್ತೂರು ಉಪಸ್ಥಿತರಿದ್ದರು. ಎಮ್.ಎಸ್.ಡಬ್ಲ್ಯೂ ವಿದ್ಯಾರ್ಥಿನಿ ರೂಪಶ್ರೀ ಸ್ವಾಗತಿಸಿದರು, ಧೀರಜ್ ನಿರೂಪಿಸಿದರು, ಸುಷ್ಮಿತಾ ವಂದಿಸಿದರು.