ಉಡುಪಿ: ಕಳ್ಳತನ ಆರೋಪಿಗೆ ಮೂರು ವರ್ಷ ಜೈಲು ಶಿಕ್ಷೆ, ₹10 ಸಾವಿರ ದಂಡ

ಉಡುಪಿ: ಏಳು ವರ್ಷಗಳ ಹಿಂದೆ ಕೆಮ್ಮಣ್ಣುವಿನಲ್ಲಿ ಎಲೆಕ್ಟ್ರಾನಿಕ್ ವಸ್ತು ಹಾಗೂ ನಗದು ಕಳವು ಮಾಡಿದ ಆರೋಪಿಗೆ ನಗರದ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

2014 ಫೆಬ್ರವರಿ 23ರಂದು ಮಧ್ಯರಾತ್ರಿ ಉಡುಪಿ ತಾಲೂಕು ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟು ನಿವಾಸಿ ಗಿರೀಶ್ ಎಂಬಾತನು ಪಡುತೋನ್ಸೆ ಗ್ರಾಮದ ಕೆಮ್ಮಣ್ಣುವಿನ ಕಾವ್ಯಾ ಅವರ ಮನೆಯಲ್ಲಿ ಲ್ಯಾಪ್‌ಟಾಪ್, ಮೊಬೈಲ್ ಹಾಗೂ 700 ರೂ. ನಗದು ಕಳವು ಮಾಡಿದ್ದನು. ಈ‌ ಬಗ್ಗೆ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಅವರು ಆರೋಪಿ ಗಿರೀಶ್‌ಗೆ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ ತಲಾ 10,000 ರೂ. ದಂಡ ವಿಧಿಸಿ, ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಮೋಹಿನಿ ಕೆ. ವಾದ ಮಂಡಿಸಿದ್ದರು.