ಉಡುಪಿ: ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯದ ಅಧೀನದಲ್ಲಿರುವ ನವದೆಹಲಿಯ ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಆಶ್ರಯದಲ್ಲಿ ‘ವಂದೇ ಮಾತರಂ’ 150ನೇ ವರ್ಷದ ಸಂಭ್ರಮ ಹಾಗೂ ಕವಿ ಚಕ್ರವರ್ತಿ ಕಾಳಿದಾಸ ಜಯಂತಿ ಅಂಗವಾಗಿ ರಾಷ್ಟ್ರವ್ಯಾಪಿ ರಾಷ್ಟ್ರೀಯ ನಾಟಕೋತ್ಸವ ಜುಲೈ 15ರಂದು ನಡೆಯಲಿದ್ದು, ಉಡುಪಿಯಲ್ಲಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.
ಉಡುಪಿ ರಂಗಭೂಮಿ ಹಾಗೂ ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜಿನ ಸಹಭಾಗಿತ್ವದಲ್ಲಿ ‘ವಂದೇ ಮಾತರಂ’ ಉತ್ಸವ, ಯುವ ರಂಗೋತ್ಸವ ಹಾಗೂ ‘ಸ್ವಾತಂತ್ರ್ಯ ಶರಧಿ’ ಕನ್ನಡ ನಾಟಕ ಪ್ರದರ್ಶನ ನಡೆಯಲಿದೆ ಎಂದು ಉಡುಪಿ ರಂಗಭೂಮಿಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಚಂದ್ರ ಕುತ್ಪಾಡಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ದೇಶಪ್ರೇಮ, ಭಾರತೀಯ ಸಂಸ್ಕೃತಿ ಹಾಗೂ ರಂಗಭೂಮಿಯ ಪರಂಪರೆಯನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ದೇಶಾದ್ಯಂತ 150ಕ್ಕೂ ಹೆಚ್ಚು ರಂಗಪ್ರಯೋಗಗಳನ್ನು ಆಯೋಜಿಸಲಾಗಿದೆ. 39ಕ್ಕೂ ಹೆಚ್ಚು ಭಾಷೆ ಮತ್ತು ಉಪಭಾಷೆಗಳಲ್ಲಿ ನಾಟಕೋತ್ಸವ ನಡೆಯಲಿದ್ದು, ‘ಒಂದು ದೇಶ–ಒಂದು ಆಚರಣೆ’ ಎಂಬ ಭಾವೈಕ್ಯತೆಯ ಸಂದೇಶ ಸಾರಲಿದೆ. ಸುಮಾರು 4 ಸಾವಿರಕ್ಕೂ ಹೆಚ್ಚು ರಂಗಕರ್ಮಿಗಳು ಹಾಗೂ 150ಕ್ಕೂ ಹೆಚ್ಚು ಸಂಸ್ಥೆಗಳು ಈ ಉತ್ಸವದಲ್ಲಿ ಭಾಗವಹಿಸಲಿದ್ದು, 20 ಲಕ್ಷಕ್ಕೂ ಅಧಿಕ ಪ್ರೇಕ್ಷಕರನ್ನು ತಲುಪುವ ಗುರಿ ಹೊಂದಲಾಗಿದೆ ಎಂದು ಹೇಳಿದರು.
ಕರ್ನಾಟಕದಲ್ಲಿ ಬೆಂಗಳೂರು ಜೊತೆಗೆ ಉಡುಪಿಯನ್ನು ಈ ವಿಶೇಷ ಉತ್ಸವಕ್ಕೆ ಆಯ್ಕೆ ಮಾಡಿರುವುದು ಜಿಲ್ಲೆಯ ಹೆಮ್ಮೆಯ ಸಂಗತಿಯಾಗಿದೆ. ಆರು ದಶಕಗಳ ಇತಿಹಾಸ ಹೊಂದಿರುವ ಉಡುಪಿ ರಂಗಭೂಮಿ ಸಂಸ್ಥೆಗೆ ಕಾರ್ಯಕ್ರಮದ ಸಂಪೂರ್ಣ ಉಸ್ತುವಾರಿ ವಹಿಸಿರುವುದು ಸಂಸ್ಥೆಯ ಕಲಾಸೇವೆಗೆ ಸಂದ ಗೌರವವಾಗಿದೆ ಎಂದರು.
ಜುಲೈ 15ರಂದು ಸಂಜೆ 5.30ಕ್ಕೆ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ.
ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವಿ. ಸುನಿಲ್ ಕುಮಾರ್, ಯಶ್ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಲಿ, ಗುರುರಾಜ ಗಂಟಿಹೊಳೆ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಉಡುಪಿ ರಂಗಭೂಮಿಯ ಕೋಶಾಧಿಕಾರಿ ಭೋಜ ಯು. ಹಾಗೂ ಆಡಳಿತ ಮಂಡಳಿ ಸದಸ್ಯ ಗಿರೀಶ್ ಯಂತ್ರಿ ಉಪಸ್ಥಿತರಿದ್ದರು.















