ಉಡುಪಿ: ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ಸಮಸ್ಯೆಯ ವಿರುದ್ಧ ಹಾಗೂ ಬಾಕಿ ಇರುವ ವಿದ್ಯಾರ್ಥಿವೇತನವನ್ನು ತಕ್ಷಣ ಬಿಡುಗಡೆ ಮಾಡಬೇಕು. ಆರೋಗ್ಯ ತಪಾಸಣೆ ಹಾಗೂ ಕಾರ್ಮಿಕರಿಗೆ ನೀಡುವ ಕಿಟ್ಗಳ ಖರೀದಿಯಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ತನಿಖೆ ನಡೆಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘಗಳ ಸಮನ್ವಯ ಸಮಿತಿ (ಸಿಐಟಿಯು) ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿ ಹಾಗೂ ಕಾರ್ಮಿಕ ಅಧಿಕಾರಿಗಳ ಕಚೇರಿ ಚಲೋ ಪ್ರತಿಭಟನೆ ನಡೆಯಿತು.
ಮಣಿಪಾಲದ ಕಾಯಿನ್ ಸರ್ಕಲ್ ಬಳಿಯಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿಯವರೆಗೆ ಸಾಗಿತು. ಕಟ್ಟಡ ಕಾರ್ಮಿಕರು, ಬಿಸಿಯೂಟ ನೌಕರರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ವಿವಿಧ ಸಮಸ್ಯೆಗಳನ್ನು ಬಗೆಹರಿಸಬೇಕು. ಬಾಕಿ ಉಳಿದಿರುವ ವಿದ್ಯಾರ್ಥಿವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಕಾರ್ಮಿಕರ ಆರೋಗ್ಯ ತಪಾಸಣೆ ಕಾರ್ಯಕ್ರಮ ಹಾಗೂ ಕಿಟ್ ಖರೀದಿಯಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕರಾವಳಿ ಭಾಗದ ಕಾರ್ಮಿಕರು ಹಾಗೂ ಮರಳು ಉದ್ಯಮಕ್ಕೆ ಸಂಬಂಧಿಸಿದಂತೆ ಸಿಆರ್ಝಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. 9/11 ಸಮಸ್ಯೆಯನ್ನು ಬಗೆಹರಿಸಿ ಕಾರ್ಮಿಕರು ಎದುರಿಸುತ್ತಿರುವ ತೊಂದರೆಗಳಿಗೆ ಪರಿಹಾರ ಕಲ್ಪಿಸಬೇಕು. ಕಟ್ಟಡ ಕಾರ್ಮಿಕರ ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯಗಳನ್ನು ವಿಳಂಬವಿಲ್ಲದೆ ತಲುಪಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಾರ್ಮಿಕರು ಪ್ರತಿಭಟನೆ ನಡೆಸಿದರು.
ಉಡುಪಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಸುಭಾಶ್ಚಂದ್ರ ನಾಯಕ್, ಪ್ರಧಾನ ಕಾರ್ಯದರ್ಶಿ ಶಶಿಧರ ಗೊಲ್ಲ, ಕುಂದಾಪುರ ತಾಲೂಕು ಸಂಘದ ಅಧ್ಯಕ್ಷ ಚಿಕ್ಕ ಮೊಗವೀರ ಗಂಗೊಳ್ಳಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಬೈಂದೂರು ತಾಲೂಕು ಸಂಘದ ಅಧ್ಯಕ್ಷ ರಾಜೀವ ಪಡುಕೋಣೆ, ಪ್ರಧಾನ ಕಾರ್ಯದರ್ಶಿ ಗಣೇಶ್ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.















