ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಜಿಲ್ಲಾ ಸರ್ವೇಕ್ಷಣ ಘಟಕ ಎನ್‌ಸಿಡಿ ವಿಭಾಗ, ಉಡುಪಿ ಜಿಲ್ಲಾ ಆಸ್ಪತ್ರೆ ಹಾಗೂ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಇವರ ಜಂಟಿ ಆಶ್ರಯದಲ್ಲಿ ವಿಶ್ವ ಪಾರ್ಶ್ವವಾಯು ದಿನಾಚರಣೆ ಮತ್ತು ಜಾಗೃತಿ ಕಾರ್ಯಕ್ರಮ ಬುಧವಾರ ನಗರದ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಹಾಗು ಕಭಿ ಕಾರ್ಯಕ್ರಮ ಅಧಿಕಾರಿ ಡಾ.ಲತಾ ನಾಯಕ್ ಮಾತನಾಡಿ, ಸಾರ್ವಜನಿಕರಲ್ಲಿ ಪಾಶ್ವವಾಯು ಬಗ್ಗೆ ಜಾಗೃತಿ ಮೂಡಿಸಲು ಯುವ ಜನರು ಕಾರ್ಯಪ್ರವೃತರಾಗಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ್ ಹುಬ್ಬಳ್ಳಿ ಮಾತನಾಡಿ, ಸಾರ್ವಜನಿಕರಲ್ಲಿ ಪಾರ್ಶ್ವವಾಯು ಬಗ್ಗೆ ಅರಿವು ಮೂಡಿಸಲು ನರ್ಸಿಂಗ್ ವಿದ್ಯಾರ್ಥಿಗಳ ಪಾತ್ರ ಬಹಳ ದೊಡ್ಡದು. ಈ ರೀತಿಯ ಮಾಹಿತಿ ಕಾರ್ಯಕ್ರಮಗಳಿಂದ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸಹಕಾರಿಯಾಗುತ್ತದೆ. ಉತ್ತಮವಾದ, ವೈವಿಧ್ಯಮಯ ಆಹಾರ ಪದ್ಧತಿ ಬಳಕೆಯು ದೇಹದ ಅತ್ಯುತ್ತಮ ಕಾರ್ಯನಿರ್ವಹಣೆಗೆ ಅಗತ್ಯವಾದ ಪೋಷಕಾಂಶಗಳನ್ನು ಪಡೆಯುತ್ತದೆ. ಇದರಲ್ಲಿ ಜೀವಸತ್ವಗಳು, ಖನಿಜಗಳು ಮತ್ತು ಇತರ ಅಗತ್ಯ ಘಟಕಗಳು ಸೇರಿದ್ದು, ಇಂತಹ ಆಹಾರಗಳ ಸೇವನೆಯು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಅಶೋಕ್ ಎ. ಮಾತನಾಡಿ, ಭಾರತದಲ್ಲಿ ಒಂದು ಲಕ್ಷದ ಜನಸಂಖ್ಯೆಗೆ 145 ಜನರು ಪಾರ್ಶ್ವವಾಯು ತುತ್ತಾಗುತ್ತಿದ್ದು, ಪ್ರತಿ ಒಂದು ನಿಮಿಷದಲ್ಲಿ ಮೂರು ಜನ ಈ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇದನ್ನು ಕಡಿಮೆ ಮಾಡಲು ಯವಜನತೆ ತಮ್ಮ ಆಹಾರ ಶೈಲಿ ಮತ್ತು ದೈಹಿಕ ಚಟುವಟಿಕೆಗೆ ಕಾಳಜಿ ನೀಡಬೇಕು ಎಂದರು.
ಪಾರ್ಶ್ವವಾಯು ತಡೆಗಟ್ಟುವ ಒಳ್ಳೆಯ ಆಹಾರಗಳನ್ನು ನಮ್ಮ ದೈನಂದಿನ ಆಹಾರದಲ್ಲಿ ಬಳಸಿಕೊಳ್ಳಬೇಕು. ನಿಯಮಿತ ದೈಹಿಕ ಚಟುವಟಿಕೆಯೊಂದಿಗೆ ಸಮತೋಲಿತ ಮತ್ತು ವೈವಿಧ್ಯಮಯ ಆಹಾರವು ಆರೋಗ್ಯಕರ ಹೃದಯರಕ್ತನಾಳದ ವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಉಪಯುಕ್ತ ಆಹಾರ ಆಯ್ಕೆ ಮಾಡುವ ಮೂಲಕ, ಪಾರ್ಶ್ವವಾಯು ತಡೆಗಟ್ಟುವಿಕೆ ಮತ್ತು ದೀರ್ಘಕಾಲೀನ ಆರೋಗ್ಯ ಹೊಂದಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು
ನಿವಾಸಿ ವೈದ್ಯಾಧಿಕಾರಿ ಡಾ.ವಾಸುದೇವ್ ಪಾರ್ಶ್ವವಾಯು ಕುರಿತು ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ನಿರಮಯ ನರ್ಸಿಂಗ್ ಕಾಲೇಜಿನ ಉಪಾನ್ಯಾಸಕಿ ಜನ್ನಿಪರ್, ಜಿಲ್ಲಾ ಆಸ್ಪತ್ರೆಯ ನರ್ಸಿಂಗ್ ಅಧಿಕಾರಿ ಲೀಲಾವತಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
















