ಉಡುಪಿ: ಉಡುಪಿ ಯಕ್ಷಗಾನ ಕಲಾರಂಗದ 2025ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ನವೆಂಬರ್ 23ರಂದು ಸಂಜೆ 4.30ಕ್ಕೆ ಉಡುಪಿಯ ಶಾರದಾ ಮಂಟಪ ರಸ್ತೆಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದರು.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಲಿದ್ದಾರೆ. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ನ ಅಧ್ಯಕ್ಷ ಡಾ. ಜಿ. ಶಂಕರ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದರು.
ಸುಪ್ರಭಾತ ಗ್ರೂಪ್ ಆಫ್ ಹೋಟೆಲ್ನ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಯಕ್ಷ ವಿದ್ಯಾಪೋಷಕ್ನ 62 ವಿದ್ಯಾರ್ಥಿಗಳಿಗೆ 7,11,500 ಸಹಾಯಧನವನ್ನು ವಿತರಿಸಲಿದ್ದಾರೆ. 23 ಮಂದಿ ಹಿರಿಯ ಕಲಾವಿದರಿಗೆ ತಲಾ ರೂ. 20,000 ನಗದು ಪುರಸ್ಕಾರದ ಪ್ರಶಸ್ತಿ, ವಿಶ್ವೇಶತೀರ್ಥ ಪ್ರಶಸ್ತಿಯನ್ನು ಬೆಂಗಳೂರಿನ ಯಕ್ಷ ಕಲಾ ಅಕಾಡೆಮಿ ಸಂಸ್ಥೆಗೆ ಪ್ರದಾನ ಮಾಡಲಾಗುವುದು. ಸಮಾರಂಭದ ಪೂರ್ವದಲ್ಲಿ ಮಧ್ಯಾಹ್ನ 1.30 ರಿಂದ 4.30ರವರೆಗೆ ಬಡಗುತಿಟ್ಟಿನ ಕಲಾವಿದರಿಂದ ಯಕ್ಷಗಾನ ತಾಮ್ರಧ್ವಜ ಕಾಳಗ ಪ್ರಸ್ತುತಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಎಂ. ಗಂಗಾಧರ ರಾವ್,ಉಪಾಧ್ಯಕ್ಷರಾದ ಎಸ್. ವಿ. ಭಟ್, ವಿ.ಜಿ. ಶೆಟ್ಟಿ, ಕೋಶಾಧಿಕಾರಿ ಪ್ರೊ. ಕೆ. ಸದಾಶಿವ ರಾವ್, ಜತೆ ಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ಉಪಸ್ಥಿತರಿದ್ದರು.

















