ಉಡುಪಿ: ದೇಶದ ಬೆನ್ನುಲುಬಾದ ರೈತಾಪಿ ವರ್ಗದ ಅಭಿವೃದ್ದಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳುಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಎಲ್ಲ ಯೋಜನೆಗಳ ಮಾಹಿತಿಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಅರಿವುಕಾರ್ಯಕ್ರಮಗಳು ಪ್ರಯೋಜನಕಾರಿಯಾಗಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಅಭಿಪ್ರಾಯಪಟ್ಟರು.
ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ ಇವರ ಜಂಟಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸರ್ಕಾರದ ಯೋಜನೆಗಳ ಮಾಹಿತಿಗಳನ್ನು ರೈತರ ಮನೆಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿಇಲಾಖಾಧಿಕಾರಿಗಳು ಮುತುವರ್ಜಿವಹಿಸಿ, ರೈತರು ಗರಿಷ್ಟ ಪ್ರಯೋಜನವನ್ನು ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು. ಕೇಂದ್ರ ಮತ್ತುರಾಜ್ಯ ಸರ್ಕಾರಗಳ ಯೋಜನೆಗಳ ಬಗ್ಗೆ ಜನರಲ್ಲಿ ಮಾಹಿತಿಯ ಕೊರತೆ ಇದ್ದಾಗ ಇಲಾಖಾಧಿಕಾರಿಗಳು ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಜನರಿಗೆ ಸರಿಯಾದ ಮಾಹಿತಿ ತಲುಪುತ್ತದೆ ಎಂದ ಅವರು, ಇಲಾಖಾಧಿಕಾರಿಗಳು ಬ್ಯಾಂಕ್ ಅಧಿಕಾರಿಗಳೊಂದಿಗೆ ಸಮನ್ವಯ ಹೊಂದಿ, ಆರ್ಥಿಕ ನೆರವು ಪಡೆಯಲು ರಾಷ್ಟ್ರೀಕೃತ ಬ್ಯಾಂಕುಗಳಿಗೆ ಭೇಟಿ ನೀಡುವ ರೈತರಿಗೆ ಸ್ಥಳೀಯ ಭಾಷೆಯಲ್ಲಿ ಮಾಹಿತಿ ನೀಡುವುದರೊಂದಿಗೆ ಜಿಲ್ಲೆಯ ಹೆಚ್ಚು ರೈತರು ಈ ಎಲ್ಲಾ ಯೋಜನೆಗಳ ಪ್ರಯೋಜನ ಪಡೆದುಕೊಳ್ಳುವಂತೆ ಮಾಡಬೇಕು ಎಂದರು.
ಇಂದಿನ ಯುವಜನರು ಕೇವಲ ಸರಕಾರಿ ಹುದ್ದೆಗಳಿಗೆ ಅವಲಂಭಿತರಾಗದೇ ಕೃಷಿ ಕ್ಷೇತ್ರದಲ್ಲಿಯೂ ತೊಡಗಿಸಿಕೊಳ್ಳಬೇಕು ಎಂದ ಅವರು,ರೈತರು ಕೇವಲ ರೈತರುಗಳಾಗಿ ಉಳಿಯದೇ ಉದ್ದಿಮೆ ಕ್ಷೇತ್ರಗಳಲ್ಲಿಯೂ ತೊಡಗಿಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಜಾರಿಗೆ ತಂದಿರುವ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ ಪ್ರಯೋಜನ ಜಿಲ್ಲೆಯ ಎಲ್ಲಾರೈತರು ಪಡೆಯುವಂತಾಗಲಿ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕೃಷಿ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ್ ನಾಯಕ್, ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯು ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಕೇಂದ್ರಸರ್ಕಾರದ 6 ಲಕ್ಷ ಮತ್ತು ರಾಜ್ಯ ಸರ್ಕಾರದ 9 ಲಕ್ಷ ಸಹಾಯಧನದೊಂದಿಗೆ ಯೋಜನೆಯ ಅಡಿಯಲ್ಲಿ ಶೇ 50 ರಷ್ಟು ಅಥವಾ ಗರಿಷ್ಟ 15ಲಕ್ಷ ರೂ. ಸಹಾಯಧನ ನೀಡಲಾಗುವುದು.
ಈವರೆಗೂ ಯೋಜನೆಯಡಿಯಲ್ಲಿ ರಾಜ್ಯದಲ್ಲಿ 6500ಕ್ಕೂ ಹೆಚ್ಚು ಉದ್ದಿಮೆದಾರರಿಗೆ ಸಾಲಮಂಜೂರಾಗಿದ್ದು 2025-26 ಸಾಲಿನ ಆಯವ್ಯಯದಲ್ಲಿ 5000 ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ 206.00 ಕೋಟಿ ಅನುದಾನ ಘೋಷಣೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ 374 ವಿವಿಧ ಉದ್ದಿಮೆದಾರರಿಗೆ ಆರ್ಥಿಕ ನೆರವು ನೀಡಲಾಗಿದ್ದು, ಪ್ರಸ್ತುತ 43 ಫಲಾನುಭವಿಗಳು ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ. ಆಹಾರ ಸಂಸ್ಕರಣಾ ಉದ್ದಿಮೆಯಲ್ಲಿರುವ ಸಾರ್ವಜನಿಕರು ಯೋಜನೆಯ ಪ್ರಯೋಜನ ಪಡೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ಸೂರಜ್ ಶೆಟ್ಟಿ, ವೆಂಕಟೇಶ್ ನಾಯ್ಕ್, ರಾಜೇಶ್ ಡಿ.ಪಿ, ರೂಪಾಶ್ರೀ ಹಾಗೂ ಡಾ. ಫಜಲ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಯೋಜನೆಯ ಕುರಿತು ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ನಗರಸಭಾಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರಾಜು, ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕ ಕುಮಾರಸ್ವಾಮಿ, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಂ.ಸಿ ರೆಡ್ಡಪ್ಪ, ಲೀಡ್ ಬ್ಯಾಂಕ್‌ನ ಸುಮನ್, ಕೆಪೆಕ್ ನ ಅರವಿಂದ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.ಕೃಷಿ ಇಲಾಖೆಯ ಅಧಿಕಾರಿ ಶ್ರೀರಾಮ್ ಹೆಗಡೆ ವಂದಿಸಿದರು.












