ಉಡುಪಿ: ಇಂಧನ ಬೆಲೆ ಏರಿಕೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಅಲೆವೂರಿನ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಉಡುಪಿ ನಗರಸಭೆ ಸದಸ್ಯ ರಮೇಶ್ ಕಾಂಚನ್, ಕೇಂದ್ರ ಸರ್ಕಾರ ಜನರಿಗೆ ನೀಡಿದ ಆಶ್ವಾಸನೆ ಈಡೇರಿಸುವಲ್ಲಿ ವಿಫಲವಾಗಿದೆ. ಸತತ ಡೀಸೆಲ್, ಪೆಟ್ರೋಲ್ ಹಾಗೂ ಗ್ಯಾಸ್ ಬೆಲೆ ಏರಿಸುವ ಮೂಲಕ ಸರ್ಕಾರ ಬಡವರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡುತ್ತಿದೆ ಎಂದು ದೂರಿದರು.
ಬಿಜೆಪಿ ಸರ್ಕಾರ ಎಲ್ಲಾ ರಂಗಗಳಲ್ಲಿಯೂ ವೈಫಲ್ಯ ಕಂಡಿದ್ದು, ಅದನ್ನು ಮುಚ್ಚಿ ಹಾಕಲು ಕಾಂಗ್ರೆಸ್ ಮೇಲೆ ಗೂಬೆ ಕೂರಿಸಲು ಯತ್ನಿಸುತ್ತಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ಜನರು ಬಿಜೆಪಿಗೆ ತಕ್ಕ ಪಾಠ ಕಳಿಸುತ್ತಾರೆ ಎಂದು ಹೇಳಿದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೃಷ್ಣಮೂರ್ತಿ ಆಚಾರ್ಯ ಮಾತನಾಡಿ, ಕೇಂದ್ರ ಸರ್ಕಾರ ಪ್ರಪಂಚದಲ್ಲಿ ಇಲ್ಲದ ತೆರಿಗೆಯನ್ನು ಜನಸಾಮಾನ್ಯರ ಮೇಲೆ ಹೇರುತ್ತಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಕಡಿಮೆ ಇದೆ. ಆದರೆ ಕೇಂದ್ರ ಸರ್ಕಾರ ದುಪ್ಪಟ್ಟು ತೆರಿಗೆ ವಿಧಿಸುವ ಮೂಲಕ ಜನರ ಮೇಲೆ ಬರೆ ಎಳೆಯುತ್ತಿದೆ ಎಂದು ಹೇಳಿದರು.
ತೈಲ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳು ಗಗನಕ್ಕೆ ಏರಿದ್ದು, ಜನರು ಬದುಕು ನಡೆಸುವುದೇ ದುಸ್ತರವಾಗಿದೆ ಎಂದರು.
ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಇನ್ನಾ, ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾ ಅಂಚನ್, ಉಪಾಧ್ಯಕ್ಷ ಸುಧಾಕರ ಪೂಜಾರಿ, ಮುಖಂಡರಾಸ ಅಲೆವೂರು ಹರೀಶ್ ಕಿಣಿ, ಯತೀಶ್ ಕರ್ಕೆರಾ, ವಿಶ್ವಾಸ್ ಅಮೀನ್, ಅಲೆವೂರು ಪಂಚಾಯತ್ ಸದಸ್ಯ ಜಲ್ಲೇಶ್, ಶಬರೀಶ್ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.