ಉಡುಪಿ: ಜಿಲ್ಲೆಯಲ್ಲಿ ಜುಲೈ 15 ರಿಂದ 27 ವರೆಗೆ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿ ನಡೆಯುವ ಕ್ಷಯರೋಗದ ಪತ್ತೆ ಹಚ್ಚುವಿಕೆಯ ಚಟುವಟಿಕೆಗಳಲ್ಲಿ ನಿರ್ದಿಷ್ಟವಾದ ಟಾರ್ಗೆಟ್‍ನ್ನು ಸಿದ್ಧಪಡಿಸಿಕೊಂಡು ಕಾರ್ಯಕ್ರಮ ರೂಪಿಸಿ, ದಿನ ನಿತ್ಯ ನಡೆಯುವ ಚಟುವಟಿಕೆಗಳ ವರದಿ ತಯಾರಿಸುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅವರು ಶುಕ್ರವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯ ಆರೋಗ್ಯ ಕೇಂದ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳ ಕುರಿತು ಮಾಹಿತಿ ಹಾಗೂ ಕ್ಷಯರೋಗ ಪತ್ತೆ ಹಚ್ಚುವಿಕೆಯ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಮಾಹಿತಿ ಪಡೆದ ಅವರು, ಆರೋಗ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಕ್ರಿಯಾತ್ಮಕವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸುವ ಜೊತೆಗೆ ಜಿಲ್ಲೆಯ ಆರೋಗ್ಯ ಕೇಂದ್ರಗಳಲ್ಲಿರುವ ಸಿಬ್ಬಂದಿಗಳು, ಆರೋಗ್ಯ ಸೇವೆಗಳು ಹಾಗೂ ರೋಗಿಗಳ ಬಗ್ಗೆ ಸ್ಪಷ್ಟವಾದ ಮಾಹಿತಿ ಹೊಂದಿರಬೇಕು ಎಂದರು.
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು, ಕ್ಷಯರೋಗ ಪತ್ತೆ ಹಚ್ಚುವಿಕೆಯ ಕುರಿತು ನಡೆಯಲಿರುವ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡುತ್ತಾ, ಈ ಕಾರ್ಯಕ್ರಮದ ಅಭಿಯಾನದ ಮೂಲಕ ಕ್ಷಯರೋಗ ಹರಡುವ ಸಾಧ್ಯತೆ ಇರುವಂತಹ ಅಪಾಯಕಾರಿ ಪ್ರದೇಶಗಳ ಮನೆ ಮನೆಗೆ ಭೇಟಿ ನೀಡಿ, ಕ್ಷಯರೋಗ ಪತ್ತೆ ಹಚ್ಚುವುದು ಹಾಗೂ ರೋಗದ ಲಕ್ಷಣಗಳು ಕಂಡು ಬಂದಲ್ಲಿ ಅವರನ್ನು ತಪಾಸಣೆಗೆ ಒಳಪಡಿಸಿ, ಖಚಿತ ಪಡಿಸಿಕೊಂಡು ಚಿಕಿತ್ಸೆ ನೀಡುವುದಾಗಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಎಂ.ಜಿರಾಮ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಮ್‍ರಾವ್ ಮತ್ತಿತರರು ಉಪಸ್ಥಿತರಿದ್ದರು.