ಮಕ್ಕಳ ಸಹಾಯವಾಣಿ ಜಾಗೃತಿ ಕಾರ್ಯಕ್ರಮಗಳ ಮಾಹಿತಿ ನೀಡಿ- ಜಿಲ್ಲಾಧಿಕಾರಿ

ಉಡುಪಿ : ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯದಿಂದ ರಕ್ಷಿಸುವ ಸಲುವಾಗಿ ಮತ್ತು ಮಕ್ಕಳ ಸಹಾಯವಾಣಿಯ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಮಾಹಿತಿಯನ್ನು 10 ದಿನಗಳೊಳಗೆ ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚನೆ ನೀಡಿದರು.

     ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಕ್ಕಳ ಸಹಾಯವಾಣಿಯ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿ, ಮಕ್ಕಳ ಸಹಾಯವಾಣಿಯ ಕುರಿತು ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸುವ ಮಕ್ಕಳು ಹಾಗೂ ಪೋಷಕರಿಗೆ ಜಾಗೃತಿ ಮೂಡಿಸುವ ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಗೋಡೆ ಬರಹ, ಪೋಸ್ಟರ್‍ಗಳನ್ನು ಅಂಟಿಸುವುದು, ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡಿ ಜಾಗೃತಿ ಮೂಡಿಸುವುದು, ಸಾರಿಗೆ ಸಂಪರ್ಕ ವ್ಯವಸ್ಥೆಗಳಾದ ಆಟೋ ರಿಕ್ಷಾ, ಬಸ್‍ಗಳಲ್ಲಿ ಮಕ್ಕಳ ಸಹಾಯವಾಣಿಯ ಜಾಗೃತಿ ಮೂಡಿಸುವ ಪೋಸ್ಟರ್‍ಗಳನ್ನು ಅಂಟಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬಹುದು ಎಂದರು.

    ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಮಾತನಾಡಿ, ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಯಾವುದೇ ಪ್ರಕರಣದಲ್ಲಿ ಮಕ್ಕಳ ಹೇಳಿಕೆಗೆ ಆದ್ಯತೆ ನೀಡಿ ಸಮಗ್ರ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

    ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ಲೇಲೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ, ಚೈಲ್ಡ್ ಇಂಡಿಯಾ ಫೌಂಡೇಶನ್ ಚೆನೈನ ಹಿರಿಯ ಕಾರ್ಯಕ್ರಮ ಸಂಯೋಜಕಿ ಚಿತ್ರಾ ಆಂಚನ್, ಚೈಲ್ಡ್ ಲೈನ್ ನಿರ್ದೇಶಕ ರಾಮಚಂದ್ರ ಉಪಾಧ್ಯಾಯ, ಮಕ್ಕಳ ಕಲ್ಯಾಣ ಸಮಿತಿ ಮಾಜಿ ಅಧ್ಯಕ್ಷ ನಾರಾಯಣ ಬಿ.ಕೆ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು, ಸ್ವಯಂ ಸೇವಾ ಸಮಿತಿಯ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.