ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ನಡೆಯುತ್ತಿದ್ದ ರಾಷ್ಟ್ರವ್ಯಾಪಿ ಪ್ರತಿಭಟನೆ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ (ಇಂದು) ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳ ದೊಡ್ಡ ಬೇಡಿಕೆಗೆ ಕೇಂದ್ರ ಸರಕಾರ ಮಂಡಿಯೂರಿದೆ.
ವಿದ್ಯಾರ್ಥಿಗಳ ಪ್ರತಿಭಟನೆಗೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಾರ್ಟಿ (CJP) ನಡುವೆ ಇಂದು (ಶನಿವಾರ) 3ನೇ ಸುತ್ತಿನ ಮಾತುಕತೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಮಹತ್ವದ ಸಭೆ ನಿಗದಿಯಾಗಿತ್ತು. ಆದ್ರೆ ಅದಕ್ಕೂ ಮುನ್ನವೇ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದು, ಯುವ ಸಮೂಹಕ್ಕೆ ಅತಿದೊಡ್ಡ ಗೆಲುವು ಸಿಕ್ಕಂತಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿದ 2 ಪುಟಗಳ ರಾಜೀನಾಮೆ ಪತ್ರವನ್ನು ಧರ್ಮೇಂದ್ರ ಪ್ರಧಾನ್ ತಮ್ಮ ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.















