ಬೆಂಗಳೂರು: ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆಯಲ್ಲಿ ನಾಳೆ (ನ.9) ರಾಜ್ಯದಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ತೀರ್ಪು ಪ್ರಕಟದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೊದಲಿಗೆ ಕೆಲವು ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಲಾಗಿತ್ತು.
ಅನಂತರ ರಾಜ್ಯದಾದ್ಯಂತ ರಜೆ ಘೋಷಣೆ ಮಾಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಅವರು ತಮ್ಮ ಟ್ವಿಟರ್ ಹಾಗೂ ಫೇಸ್ಬುಕ್ ಖಾತೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಗು ಭದ್ರತೆ ನಿಯೋಜಿಸಲಾಗಿದೆ. ದಕ್ಷಿಣ ಕನ್ನಡ ಸೇರಿ ಇತರ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಜತೆಗೆ ಸಾಮಾಜಿಕ ಜಾಲಾತಾಣಗಳಲ್ಲಿ ತೀರ್ಪು ಕುರಿತಾದ ಯಾವುದೇ ಹೇಳಿಕೆಗಳನ್ನು ಪ್ರಕಟಿಸದಂತೆ ಈಗಾಗಲೇ ಸೂಚನೆ ನೀಡಲಾಗಿದೆ.
ರಾಜ್ಯದಾದ್ಯಂತ 24 ಗಂಟೆಗಳ ಕಾಲ ಎಲ್ಲ ವೈನ್ ಶಾಪ್, ಮದ್ಯದಂಗಡಿ, ಬಾರ್ ಆ್ಯಂಡ್ ರೆಸ್ಟೋರೆಂಟ್ ಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ