ಬೆಂಗಳೂರು: ರಾಜ್ಯ ಸರ್ಕಾರವು ಕೊರೊನಾ ಹಿನ್ನೆಲೆಯಲ್ಲಿ ಜಾರಿಗೊಳಿಸಿದ್ದ ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಅವರು ವಿದ್ಯಾಗಮ ಕಾರ್ಯಕ್ರಮವನ್ನು ಸ್ಥಗಿತಗೊಳಿಸುವಂತೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದ್ದಾರೆ.
ಈ ಕುರಿತು ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ವಿದ್ಯಾಗಮ ಸಮಾಜದ ಕೆಳಸ್ಥರದ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತವನ್ನು ಮನದಲ್ಲಿ ಇಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮವಾಗಿದೆ. ಆದರೆ ಇದೀಗ ಇದಕ್ಕೆ ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ ಅಂಶಗಳ ಸ್ವೀಕಾರ ಹಾಗೂ ಅದರ ಸಮರ್ಪಕ ವಿಶ್ಲೇಷಣೆ ಪೂರ್ಣಗೊಳ್ಳುವವರೆಗೂ ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದ್ದಾರೆ.












