ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಬೇಡಿಕೆ?.: ಇಬ್ಬರು‌ ಮುಖಂಡರ ಉಚ್ಚಾಟನೆಗೂ ಪಟ್ಟು.!

ನವದೆಹಲಿ: ಬಿ.ಎಸ್. ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವುದಾದರೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ತಮಗೆ ಕೊಡಬೇಕು ಎಂದು ಹಾಲಿ ಉಪಾಧ್ಯಕ್ಷರಾಗಿರುವ ಬಿ.ವೈ. ವಿಜಯೇಂದ್ರ ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ.

ವಿಜಯೇಂದ್ರ ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದಂತಹ ವೇಳೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಿ ಈ ಬೇಡಿಕೆ ಸಲ್ಲಿಸಿದ್ದರು. ಇದರ ಜತೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಚಿವ ಯೋಗೇಶ್ವರ್ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟಿದ್ದಾರೆ ಎನ್ನಲಾಗಿದೆ.

ಭಿನ್ನಮತೀಯರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವ ಬಗ್ಗೆ ವರಿಷ್ಠರು ಭರವಸೆ ಕೊಟ್ಟಿದ್ದು, ಸದ್ಯದಲ್ಲೇ ಅವರೆಲ್ಲರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂಬ ಸುದ್ದಿಯೂ ಹರಿಬಿಡಲಾಯಿತು. ಪಕ್ಷದ ಅಧ್ಯಕ್ಷ ಸ್ಥಾನದ ಮೇಲೆ ವಿಜಯೇಂದ್ರ ಕಣ್ಣಿಟ್ಟಿರುವ ಹಿನ್ನೆಲೆಯಲ್ಲಿ, ಹಾಲಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ದುರ್ಬಲ ಅಧ್ಯಕ್ಷ ಎಂದು ಬಿಂಬಿಸುವ ಯತ್ನವೂ ನಡೆಯುತ್ತಿದೆ ಎಂದೂ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.