ಬೆಂಗಳೂರು: ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆ ಆರಂಭವಾಗಿದ್ದು, ಜೂನ್ 30ರಿಂದ ಜುಲೈ 29ರವರೆಗೆ ಚುನಾವಣಾಧಿಕಾರಿಗಳು ಹಾಗೂ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸಲಿದ್ದಾರೆ.
ಈ ಅವಧಿಯಲ್ಲಿ ಬಿಎಲ್‌ಒಗಳು ಮತದಾರರಿಗೆ ಎಸ್‌ಐಆರ್ ಅರ್ಜಿಯನ್ನು ವಿತರಿಸಲಿದ್ದು, ಮತದಾರರು ಅರ್ಜಿಯನ್ನು ಭರ್ತಿ ಮಾಡಿ ಸಹಿ ಹಾಕಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕಿದೆ. ಈ ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಲ್ಲಿರುವ ಹೆಸರುಗಳ ಪರಿಶೀಲನೆ, ತಿದ್ದುಪಡಿ, ಹೊಸ ಮತದಾರರ ಹೆಸರು ಸೇರ್ಪಡೆ, ಮೃತಪಟ್ಟವರು ಹಾಗೂ ಸ್ಥಳಾಂತರಗೊಂಡವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವ ಕಾರ್ಯವೂ ನಡೆಯಲಿದೆ.
ಚುನಾವಣಾ ಆಯೋಗದ ಸೂಚನೆಯಂತೆ, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಿ ಅಗತ್ಯ ಮಾಹಿತಿಯನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸದಿದ್ದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಮುಂದುವರಿಯದಿರುವ ಸಾಧ್ಯತೆ ಇದ್ದು, ಮತದಾನದ ಹಕ್ಕಿನ ಮೇಲೂ ಪರಿಣಾಮ ಬೀಳಬಹುದು.
ಪರಿಷ್ಕರಣೆ ವೇಳಾಪಟ್ಟಿ:
- ಜೂನ್ 30 – ಜುಲೈ 29: ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹ
- ಆಗಸ್ಟ್ 5: ಕರಡು ಮತದಾರರ ಪಟ್ಟಿ ಪ್ರಕಟಣೆ
- ಆಗಸ್ಟ್ 5 – ಸೆಪ್ಟೆಂಬರ್ 4: ಕರಡು ಪಟ್ಟಿಗೆ ಆಕ್ಷೇಪಣೆ ಮತ್ತು ಸಲಹೆ ಸಲ್ಲಿಕೆ
- ಆಗಸ್ಟ್ 5 – ಅಕ್ಟೋಬರ್ 3: ಹಕ್ಕುಗಳು ಮತ್ತು ಆಕ್ಷೇಪಣೆಗಳ ವಿಚಾರಣೆ ಹಾಗೂ ವಿಲೇವಾರಿ
- ಅಕ್ಟೋಬರ್ 7: ಅಂತಿಮ ಮತದಾರರ ಪಟ್ಟಿ ಪ್ರಕಟಣೆ
ಅರ್ಜಿ ಸಲ್ಲಿಕೆಗೆ ಅಗತ್ಯ ದಾಖಲೆಗಳು:
- ಕುಟುಂಬದ ಸದಸ್ಯರ ಗುರುತಿನ ದಾಖಲೆ (ಅಗತ್ಯವಿದ್ದಲ್ಲಿ)
- ಮತದಾರರ ಗುರುತಿನ ಚೀಟಿ (ವೋಟರ್ ಐಡಿ)
- ಆಧಾರ್ ಕಾರ್ಡ್
- ವಿಳಾಸ ದೃಢೀಕರಣ ದಾಖಲೆ
- ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ
ಮತದಾರರು ಬಿಎಲ್‌ಒಗಳು ಮನೆಗೆ ಭೇಟಿ ನೀಡುವ ವೇಳೆ ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಂಡು ಅರ್ಜಿಯನ್ನು ಪೂರ್ಣಗೊಳಿಸಿದರೆ, ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸರಿಯಾಗಿ ದಾಖಲಾಗಿದ್ದು, ಮತದಾನದ ಹಕ್ಕು ನಿರಂತರವಾಗಿ ಮುಂದುವರಿಯಲಿದೆ.

















