ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು: ಶ್ಯಾಮಲ ಕುಂದರ್

ಉಡುಪಿ: ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಶಿಕ್ಷಣ ಕೊಡುವ ಕಾರ್ಯದ ಜತೆಗೆ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲ ಕುಂದರ್ ಹೇಳಿದರು.

ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಸರ್ಕಾರ ಮಹಿಳೆಯರು ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳು ಪ್ರತಿಶತ 100 ರಷ್ಟು ಅನುಷ್ಠಾನವಾಗಬೇಕು ಎಂದು ತಿಳಿಸಿದರು.

ದೌಜನ್ಯಕ್ಕೆ ಒಳಗಾದ ಮಹಿಳೆ ಮತ್ತು ಮಕ್ಕಳಿಗೆ ಕಾನೂನಿನ ನೆರವು ಒದಗಿಸಬೇಕು. ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಮಹಿಳೆಯರ ಮೇಲಾಗುವ ದೌರ್ಜನ್ಯ ತಡೆಯಲು ಎಲ್ಲಾ ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಅಂತರಿಕ ದೂರು ಸಮಿತಿಗಳನ್ನು ರಚಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕ ಶೇಷಪ್ಪ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.