ಉಡುಪಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಮಹಿಳೆಯರಿಗೆ ವಿವಿಧ ಕ್ರೀಡಾಕೂಟ ಶುಕ್ರವಾರ ಮಲ್ಪೆ ಬೀಚ್ನಲ್ಲಿ ನಡೆಯಿತು.
ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟ, ಮಹಿಳಾ ಮಂಡಳಿ ಒಕ್ಕೂಟ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾ ಇಲಾಖೆ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಮಾತನಾಡಿ, ಮತದಾನದ ಬಗ್ಗೆ ಜಾಗೃತಿ ಮೂಡಿಸಿ, ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಸರ್ವರೂ ಪಾಲ್ಗೊಳ್ಳುವಂತಾಗಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಸಂವಿದಾನವು ಪ್ರತಿಯೊಬ್ಬರಿಗೂ ಈ ಮತದಾನದ ಹಕ್ಕನ್ನು ನೀಡಿದ್ದು, ಎಲ್ಲರೂ ಯೋಚಿಸಿ ಮತದಾನ ಮಾಡಬೇಕು ಎಂದು ಕರೆ ನೀಡಿದರು.
ಕ್ರೀಡಾಕೂಟದಲ್ಲಿ ಸ್ತ್ರೀ ಶಕ್ತಿ ಸಂಘಟನೆಯ ಸದಸ್ಯರು, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ವಿವಿಧ ಇಲಾಖೆಯ ಮಹಿಳಾ ಸಿಬ್ಬಂಧಿಗಳು ಭಾಗವಹಿಸಿದರು. ಮಹಿಳೆಯರಿಗೆ ತ್ರೋಬಾಲ್, ಹಗ್ಗ ಜಗ್ಗಾಟ ಹಾಗೂ ಮೆಹೆಂದಿ ಮೂಲಕ ಮತದಾನ ಸಂದೇಶ ನೀಡುವ ಚಿತ್ರಣವನ್ನು ಬಿಡಿಸುವ ಕಾರ್ಯಕ್ರಮ ನಡೆದವು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿಂಧೂ.ಬಿ ರೂಪೇಶ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಶಾ ಜೇಮ್ಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಗ್ರೇಸಿ ಎನ್. ಗೊನ್ಸಾಲ್ವಿಸ್, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿಂಧೂ.ಬಿ ರೂಪೇಶ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಶಾ ಜೇಮ್ಸ್ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದರು.